ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ನಿರ್ವಹಣೆ ಹಾಗೂ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಇಲಾಖೆಯು ಶುಕ್ರವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕೃಷಿ ಜಮೀನಿಗೆ ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಲಕ್ಷ್ಮಮ್ಮ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ. ಜಿ. ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಇಲಾಖೆಯ ಅಧೀನ ಕಾರ್ಯದರ್ಶಿ ಮುಬಾರಕ್ ಅಹ್ಮದ್, ಈ ಮಾಹಿತಿ ನೀಡಿದರು.
ಹಿಂದಿನ ವಿಚಾರಣೆ ವೇಳೆ ಪ್ರಕರಣದ ಪ್ರತಿವಾದಿಗಳಾದ ಇಲಾಖೆಯ ಅಧಿಕಾರಿಗಳಾಗಲಿ ಅಥವಾ ಅವರ ಪರ ವಕೀಲರಾಗಲಿ ಹಾಜರಿರದ ಕಾರಣ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಖುದ್ದು ಹಾಜರಿರಬೇಕು ಎಂದು ತಾಕೀತು ಮಾಡಿತ್ತು. ಅದರಂತೆ, ಶುಕ್ರವಾರದ ವಿಚಾರಣೆ ವೇಳೆ ಅಧೀನ ಕಾರ್ಯದರ್ಶಿ ಹಾಜರಾಗಿದ್ದರು.
ಈ ವೇಳೆ, ಕೋರ್ಟ್ ಪ್ರಕರಣಗಳ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಈಗಾಗಲೇ ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ. ಕೋರ್ಟ್ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂದು ಮುಬಾರಕ್ ಅಹ್ಮದ್ ನ್ಯಾಯಪೀಠಕ್ಕೆ ತಿಳಿಸಿದರು.
ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಲಕ್ಷ್ಮಮ್ಮ ಅವರ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಅಧೀನ ಕಾರ್ಯದರ್ಶಿಗೆ ತಾಕೀತು ಮಾಡಿ ವಿಚಾರಣೆ ಮುಂದೂಡಿತು.