Advertisement

ಅಧಿಕಾರಿಗಳ ಜತೆ ಆರಗ ಜ್ಞಾನೇಂದ್ರ ಸಭೆ

09:32 AM Apr 18, 2022 | Team Udayavani |

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ, ದಾಂಧಲೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ರವಿವಾರ ಸಂಜೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Advertisement

ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಗಲಭೆ ಕುರಿತು ಮಹಾನಗರ ಪೊಲೀಸ್‌ ಆಯುಕ್ತ ಲಾಭೂರಾಮ ಅವರಿಂದ ಮಾಹಿತಿ ಪಡೆದರು.

ನಂತರ ಕೆಲ ಸಂಘಟನೆಗಳ ಪ್ರಮುಖರು ಗೃಹ ಸಚಿವರನ್ನು ಭೇಟಿಯಾಗಿ ಪೊಲೀಸ್‌ ಠಾಣೆ, ದೇವಸ್ಥಾನ, ಆಸ್ಪತ್ರೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಭಯ ವಾತಾವರಣ ಸೃಷ್ಟಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಗಲಭೆಯಲ್ಲಿ ಪಾಲ್ಗೊಂಡಿದ್ದವರನ್ನು ಗುರುತಿಸಿ ಬಂಧಿಸಲಾಗುತ್ತಿದೆ. ನಗರದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಲ್ಲರೂ ಶಾಂತಿ ಕಾಪಾಡುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಸಭೆ ನಂತರ ಸುದ್ದಿಗಾರರಗೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಕಲ್ಲು ತೂರಾಟ ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪರೆಡ್ಡಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಯಲಿದೆ. ಪ್ರಕರಣದಲ್ಲಿ ಪಾಲ್ಗೊಂಡಿದ್ದವರು ಯಾವ ಮತೀಯ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಗಲಭೆ ಹಿನ್ನೆಲೆ ಏನು ಎನ್ನುವ ಸಂಪೂರ್ಣ ತನಿಖೆಯಾಗಲಿದೆ. ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.

Advertisement

ಗಲಭೆಯನ್ನು ಕಡಿಮೆ ಸಮಯದಲ್ಲಿ ನಿಯಂತ್ರಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಶ್ರಮಿಸಿದ್ದಾರೆ. ಕೊಂಚ ಹಿಂದೇಟು ಹಾಕಿದ್ದರೆ ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ರೂಪಕ್ಕೆ ತಿರುಗುತ್ತಿತ್ತು. ಘಟನೆಯಲ್ಲಿ ಪೊಲೀಸರಿಗೆ ಪೆಟ್ಟಾಗಿವೆ. ವಾಹನಗಳು ಜಖಂಗೊಂಡಿವೆ. ಅವಹೇಳನಕಾರಿ ಪೋಸ್ಟ್‌ ಮಾಡಿದ್ದರ ಬಗ್ಗೆ ಒಂದಿಷ್ಟು ಜನರು ಠಾಣೆಗೆ ಬಂದು ದೂರು ಕೊಟ್ಟು ಹೋದ ನಂತರ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದು ಈ ಗಲಭೆ ಮಾಡಿದ್ದಾರೆ. ಎಲ್ಲಾ ರೀತಿಯಿಂದಲೂ ಹಲ್ಲೆ ಮಾಡುವ ಪ್ರಯತ್ನಗಳು ನಡೆದಿವೆ. ಕಡಿಮೆ ಸಂಖ್ಯೆಯಲ್ಲಿ ಪೊಲೀಸರು ಇದ್ದರೂ ಇದನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಪೊಲೀಸರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ ಜೋಶಿ, ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಮಾಜಿ ಸಿಎಂ ಜಗದೀಶ ಶೆಟ್ಟರ, ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪಾಲಿಕೆ ಆಯುಕ್ತ ಡಾ|ಬಿ. ಗೋಪಾಲಕೃಷ್ಣ, ಎಸ್ಪಿ ಕೃಷ್ಣಕಾಂತ ಸೇರಿದಂತೆ ಹಿರಿಯ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next