ಬೆಂಗಳೂರು:ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗ ನಿಗದಿತ ಕಾರ್ಯತಂತ್ರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಸೂಚನೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಸಂಚಾಲಕರು ಹಾಗೂ ಸಹ ಸಂಚಾಲಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಗುರಿ ಇದೀಗ ಲೋಕಸಭೆ ಚುನಾವಣೆಯಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ ಹಾಗೂ ರಾಜ್ಯದ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ನಾವು ಲೋಕಸಭೆ ಚುನಾವಣೆ ಎದುರಿಸಬೇಕಿದೆ. ಮತದಾರರಿಗೆ ಬಿಜೆಪಿಯ ಕಾರ್ಯಕ್ರಮಗಳು ತಲುಪಬೇಕಾದರೆ ಸಾಮಾಜಿಕ ಜಾಲತಾಣ ಪರಿಣಾಮಕಾರಿ ಮಾಧ್ಯಮವಾಗಿದೆ ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣ ವಿಭಾಗ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಇದೇ ರೀತಿಯಲ್ಲಿ ಲೋಕಸಭೆ ಚುನಾವಣೆಗೂ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಲೋಕಸಭೆ ಚುನಾವಣೆ ಮುಂಚಿತವಾಗಿಯಾದರೂ ಬರಬಹುದು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯೂ ಯಾವಾಗ ಬೇಕಾದರೂ ಬರಬಹುದು. ಸಾಮಾಜಿಕ ಜಾಲತಾಣ ವಿಭಾಗ ಸಜ್ಜಾಗಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ, ಸಹ ಸಂಚಾಲಕರನ್ನು ಸನ್ಮಾನಿಸಲಾಯಿತು.