ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸಂಪರ್ಕಗಳನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ “ಆರೋಗ್ಯ ಸೇತು’ ಮೊಬೈಲ್ ಆ್ಯಪ್ ಡೌನ್‌ಲೋಡ್ ಹಾಗೂ ಬಳಕೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ, ಈ ವಿಚಾರದಲ್ಲಿ ತನ್ನ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಆರೋಗ್ಯ ಸೇತು ಆ್ಯಪ್ ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆಕ್ಷೇಪಿಸಿ ಡಿಜಿಟಲ್ ವಲಯದಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ನಿವಾಸಿ ಅನಿವರ್ ಎ. ಅರವಿಂದ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್. ಓಕ್ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ ಅವರು, 2020ರ ಜೂ.4ರಂದು ಕೇಂದ್ರ ಗೃಹ ಸಚಿವಾಲಯ ಸಚಿವಾಲಯ ಹೊರಡಿಸಿರುವ ಎಸ್‌ಒಪಿ ಪ್ರಕಾರ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಹಾಗೂ ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿಲ್ಲ, ಅದು ಐಚ್ಛಿಕವಾಗಿದೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.
ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಎಲ್ಲಾ ಪ್ರಯಾಣಿಕರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು ಮತ್ತು ಬಳಸಬೇಕು ಎಂದು 2020ರ ಜು.30ರಂದು ಭಾರತೀಯ ವಿಮಾನಯಾನ ಪ್ರಾಧಿಕಾರ ಕರ್ನಾಟಕದ ಐದು ವಿಮಾನ ನಿಲ್ದಾಣಗಳು ಸೇರಿದಂತೆ ವಿವಿಧ ರಾಜ್ಯಗಳ ವಿಮಾನ ನಿಲ್ದಾಣಗಳಿಗೆ ಅನ್ವಯವಾಗುವಂತೆ ಸೂಚನೆ ಹೊರಡಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆ್ಯಪ್ ಬಳಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ಏನು? ಈ ಸಂಬಂಧ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ಸೂಚನೆ ಗಳನ್ನೇದಾರೂ ಹೊರಡಿಸಿ ದೆಯೇ? ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತು.
ಸಷ್ಪನೆ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ : ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಹೊರಡಿಸಲಾಗಿರುವ ಸೂಚನೆ ಬಗ್ಗೆ ಸ್ಪಷ್ಟನೆ ನೀಡುವಂತೆ ಭಾರತೀಯ ವಿಮಾನಯಾನ ಪ್ರಾಧಿಕಾರದ ಪರ ವಕೀಲರಿಗೆ ನ್ಯಾಯ ಪೀಠ ಸೂಚಿಸಿತು. ಆಗಸ್ಟ್ 31ರವರೆಗೆ ಮೆಟ್ರೋ ಸಂಚಾರಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಾಗಾದರೆ, ಮೆಟ್ರೋ ಸಂಚಾರ ಆರಂಭವಾದ ಮೇಲೆ ಆ್ಯಪ್ ಬಳಸಬೇಕು ಎಂದು ಹೇಳಿರುವ ಬಗ್ಗೆ ವಿವರಣೆ ನೀಡುವಂತೆ ಬಿಎಂಆರ್ ಸಿಎಲ್ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆ.13ಕ್ಕೆ ಮುಂದೂಡಿತು.