ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 2.30 ಲಕ್ಷ ರೂ. ಮೌಲ್ಯದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಬಾರೆಕಾಡು ಹೌಸ್ ಲೋರೆಟ್ಟೋ ನಿವಾಸಿ ಅಬ್ದುಲ್ ಸಮದ್ ಯಾನೆ ಸಮದ್ ಯಾನೆ ಚಮ್ಮು (36) ಬಂಧಿತ ಆರೋಪಿ.
ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ನೆಹರೂ ಮೈದಾನದ ಬಳಿ ಅಕ್ರಮವಾಗಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಈತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,40,500 ರೂ. ಎಂದು ಅಂದಾಜಿಸಲಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್. ಎಂ., ಪಿಎಸ್‌ಐ ಶರಣಪ್ಪ ಭಂಡಾರಿ ಮತ್ತು ಸಿಬಂದಿ ಭಾಗವಹಿಸಿದ್ದರು.