Advertisement

ಪ್ರಥಮ ಪಿಎಸಿ ಸಭೆಗೆ ಕಲಬುರಗಿ ಸಜ್ಜು

10:46 AM Nov 27, 2018 | Team Udayavani |

ಕಲಬುರಗಿ: ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ನ. 27 ಮತ್ತು 28ರಂದು ನಡೆಯುತ್ತಿರುವ ಸಂಸತ್ತಿನ ಮಹತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಪಿಎಸಿ ಸದಸ್ಯರು ಮತ್ತು ಅಧಿಕಾರಿಗಳು ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಭೆ ನಡೆಸಲಿದ್ದಾರೆ.

Advertisement

ನ.27ರಂದು ನಗರಕ್ಕೆ ಸಭೆಗೆ ಆಗಮಿಸುವ ಪಿಎಸಿ ಅಧ್ಯಕ್ಷರು ಹಾಗೂ ಸದಸ್ಯ ಸಂಸದರು ಹಾಗೂ ಅಧಿಕಾರಿಗಳು ನಿಗದಿತ ಸ್ಥಳಗಳಿಗೆ ಭೇಟಿ ನೀಡಲು, ಸಭೆ ನಡೆಸಲು ಮತ್ತು ಅವರ ವಾಸ್ತವ್ಯಕ್ಕೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಸಭೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 500ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ.

ಹೈದ್ರಾಬಾದ್‌ ಮೂಲಕ ಮಧ್ಯಾಹ್ನ 12:00ಕ್ಕೆ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯ ಸಂಸದರು ಹಾಗೂ ಅಧಿಕಾರಿಗಳು ನಗರಕ್ಕೆ ಆಗಮಿಸಲಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆದು ಬಳಿಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
 
ನಂತರ ಇಎಸ್‌ಐಸಿ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 4:00ಕ್ಕೆ ಕಲಬುರಗಿ ನೂತನ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳೊಂದಿಗೆ ವಿಮಾನಯಾನ ಸಂಚಾರ ಆರಂಭಕ್ಕೆ ಸಂಬಂಧಿಸಿದಂತೆ ಚರ್ಚಿಸುವರು. ನಂತರ ಎಚ್‌ಕೆಆರ್‌ಡಿಬಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜತೆಗೆ ಪ್ರತ್ಯೇಕವಾಗಿ ಸಭೆ ನಡೆಸುವರು.

ನ.27ರಂದು ಎಲ್ಲ ಸದಸ್ಯರು, ಅಧಿಕಾರಿಗಳು ನಗರದಲ್ಲೇ ವಾಸ್ತವ್ಯ ಮಾಡುವರು. ಐವಾನ್‌ -ಇ-ಶಾಹಿ ಅತಿಥಿ ಗೃಹ, ಗುಲಬರ್ಗಾ ವಿಶ್ವವಿದ್ಯಾಲಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಖಾಸಗಿ ಹೊಟೇಲ್‌ ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. 

ನ.28ರಂದು ಬೆಳಗ್ಗೆ 10:00ಕ್ಕೆ ನಗರದ ಎಚ್‌ಕೆಆರ್‌ಡಿಬಿ ಸಭಾಂಗಣದಲ್ಲಿ ಹಣಕಾಸು ಸಚಿವಾಲಯದ ಅಧಿಕಾರಿಗಳು ಹಾಗೂ ವಿವಿಧ ಬ್ಯಾಂಕ್‌ ಮುಖ್ಯಸ್ಥರೊಂದಿಗೆ ವಿಶೇಷವಾಗಿ ಕರ್ನಾಟಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ. ನಂತರ ಬೆಳಗ್ಗೆ 11:30ಕ್ಕೆ ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಅಧಿಕಾರಿಗಳು ಮತ್ತು ವಿವಿಧ ವಲಯದ ಜನರಲ್‌ ಮ್ಯಾನೇಜರ್‌ಗಳೊಂದಿಗೆ ಭಾರತೀಯ ರೈಲ್ವೆಯಲ್ಲಿ ಕ್ಯಾಟರಿಂಗ್‌ ಸೇವೆ ಕುರಿತು ಸಮಿತಿ ಅಧ್ಯಕ್ಷರು, ಸದಸ್ಯರು ಚರ್ಚೆ ನಡೆಸುವರು.

Advertisement

22 ಸದಸ್ಯರ ಸಮಿತಿ: ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅತ್ಯಂತ ಮಹತ್ವದ ಸಮಿತಿಯಾಗಿದೆ. ಕೇಂದ್ರ ಸರ್ಕಾರದ ಹಣಕಾಸಿನ ಖರ್ಚಿನಲ್ಲಿ ತಪ್ಪುಗಳನ್ನು ಪರಿಶೀಲಿಸುವ ಉನ್ನತ ಅಧಿಕಾರ ಹೊಂದಿದೆ. ಪ್ರತಿ ವರ್ಷವೂ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಗುತ್ತದೆ. ಲೋಕಸಭೆಯ 15 ಜನ ಸದಸ್ಯರು, ರಾಜ್ಯಸಭೆಯ 7 ಜನ ಸದಸ್ಯರು ಸೇರಿದಂತೆ ಒಟ್ಟು 22 ಜನ ಸಂಸದರು ಲೆಕ್ಕಪತ್ರ ಸಮಿತಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್‌ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದಾರೆ. ಎಲ್ಲ ಸದಸ್ಯರು ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ಕಲಬುರಗಿಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆ ಅತ್ಯಂತ ಗೌಪ್ಯವಾಗಿದೆ. ನ.27ರಂದು ಇಎಸ್‌ಐಸಿ ಆಸ್ಪತ್ರೆ, ವಿಮಾನ ನಿಲ್ದಾಣ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಮಾಲೋಚನೆ ನಡೆಸಲಿದ್ದಾರೆ.

ಕಲಬುರಗಿಯಲ್ಲಿ ಎರಡು ದಿನಗಳ ಕಾಲ ನಡೆಯುವ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗೆ ಎಚ್‌ಕೆಆರ್‌ಡಿಬಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಮಿತಿ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳ ಜತೆಗೆ ಪ್ರತ್ಯೇಕವಾಗಿ ಸಭೆ ನಡೆಸುವರು.
 ಸುಬೋಧ ಯಾದವ, ಪ್ರಾದೇಶಿಕ ಆಯುಕ್ತರು, ಕಲಬುರಗಿ

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಾಗಿ ಗಣ್ಯರು, ಹಿರಿಯ ಅಧಿಕಾರಿಗಳು ಆಗಮಿಸುತ್ತಿರುವ ಕಾರಣ ನಗರದಲ್ಲಿ ಹಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ನಗರ ಮತ್ತು ಹೊರವಲಯ ಸ್ಥಳಗಳಿಗೆ ಭೇಟಿ ಕೊಡುತ್ತಿರುವುದರಿಂದ ಅವರು ಭೇಟಿ ನೀಡುತ್ತಿರುವ ಸ್ಥಳಗಳ ಆಯಕಟ್ಟಿನಲ್ಲಿ ಬಂದೋಬಸ್ತ್ ಕಲ್ಪಿಸಲಾಗವುದು. ಐವರು ಡಿವೈಎಸ್‌ಪಿ, 15 ಇನ್ಸ್‌ಪೆಕ್ಟರ್‌, 20 ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಲೋಕೇಶ ಜೆ ,ಎಎಸ್‌ಪಿ, ಎ ಉಪವಿಭಾಗ, ಕಲಬುರಗಿ

Advertisement

Udayavani is now on Telegram. Click here to join our channel and stay updated with the latest news.

Next