Advertisement

ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಗೆ ಜನ ತಕ್ಕ ಉತ್ತರ ನೀಡಲಿದ್ದಾರೆ: ಅರುಣ್ ಸಿಂಗ್

08:56 AM Nov 08, 2022 | Team Udayavani |

ಬೆಂಗಳೂರು : ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಯಾವತ್ತೂ ಕ್ಷಮಿಸುವುದಿಲ್ಲ; ಜನರು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.

Advertisement

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಯಾವತ್ತೂ ನಮ್ಮ ಪ್ರಾಚೀನ- ಶ್ರೇಷ್ಠ ಸಂಸ್ಕೃತಿ ಮತ್ತು ಧರ್ಮವನ್ನು ಹೀಯಾಳಿಸುವ ಕೆಲಸ ಮಾಡುತ್ತದೆ. ಈ ರೀತಿಯ ನಿಂದನೆ ಅಕ್ಷಮ್ಯ. ಸತೀಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪಕ್ಷವು ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ರಾಹುಲ್ ಗಾಂಧಿ, ಸ್ಥಳೀಯರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಹಿಂದೂಗಳ ಅವಹೇಳನವನ್ನು ಸಮರ್ಥಿಸಿದಂತೆ ಆಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ತಾಕತ್ತು ಉಳಿದಿಲ್ಲ. ಆ ಪಕ್ಷವು ಸಂಪೂರ್ಣ ದುರ್ಬಲವಾಗಿದೆ. ಆದ್ದರಿಂದ ಕರ್ನಾಟಕದಲ್ಲಿ ಗೆಲ್ಲುವ ಕುರಿತ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಯಾವುದೇ ಮಹತ್ವ ಇಲ್ಲ ಎಂದು ಅವರು ನುಡಿದರು.

ಕಾಂಗ್ರೆಸ್ ಪಕ್ಷ ನಾಮಾವಶೇಷ ಆಗಲಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷ ಸೋಲಲಿದೆ. ಎಲ್ಲ ಕಡೆ ಬಿಜೆಪಿ ಗೆಲ್ಲುತ್ತ ಸಾಗಲಿದೆ. ಕರ್ನಾಟಕದಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದರು.

ಕಾರ್ಯಕರ್ತರ ಶ್ರಮದಿಂದ 150 ಸೀಟು ಖಚಿತ
ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು ಪ್ರವಾಸ ಮಾಡುತ್ತಿದ್ದಾರೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಸಶಕ್ತ ಬೂತ್ ಮಟ್ಟದ ಕಾರ್ಯಕರ್ತರಿಂದ ಪಕ್ಷ ಗೆಲ್ಲುತ್ತದೆ. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಕಾಂಗ್ರೆಸ್ ನವರ ಬಳಿ ಹೇಳಿಕೊಳ್ಳಲು ಏನೂ ಇಲ್ಲ; ಕರ್ನಾಟಕದಲ್ಲಿ ನಾವು ಗಮನಾರ್ಹ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ನಾವು ಮಾಡಿರುವ ಕೆಲಸ ನೋಡಿ ಜನತೆ ಮುಂದಿನ ಬಾರಿ ಬಿಜೆಪಿಗೇ ಅಧಿಕಾರ ನೀಡಲಿದ್ದಾರೆ. ರಾಜ್ಯದ ಎಲ್ಲ ಸಚಿವರು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಕಾಮನ್ ಮ್ಯಾನ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಯೋಜನೆಗಳು, ಕಾರ್ಯವೈಖರಿಯನ್ನು ರಾಜ್ಯದ ಜನರು ಮೆಚ್ಚಿಕೊಂಡಿದ್ದಾರೆ. ಆದ್ದರಿಂದ ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುತ್ತದೆ ಎಂದು ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next