ಬೀದರ: ಕೆಪಿಸಿಸಿ ಕಾರ್ಯದರ್ಶಿ ಆಗಿರುವ ಜಿಲ್ಲೆಯ ಅರವಿಂದಕುಮಾರ ಅರಳಿ ವಿಧಾನ ಪರಿಷತ್ ಸದಸ್ಯರಾಗಿ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ನಗಳಿಗೆ ಜೂ. 11ರಂದು ನಡೆಯಲಿದ್ದ ಚುನಾವಣೆಗೆ ಕಾಂಗ್ರೆಸ್‌ನ ಅರವಿಂದಕುಮಾರ ಅರಳಿ ಸೇರಿ 11 ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅರವಿಂದಕುಮಾರ ಅರಳಿ ಅವರು ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಪಡೆದರು. 1992ರಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅರಳಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆ ನಿರ್ವಹಿಸಿದ್ದಾರೆ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅರಳಿ ಈವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.
ಕಳೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಆ ಅವಕಾಶ ಅವರಿಗೆ ಸಿಕ್ಕಿರಲಿಲ್ಲ. ಈಗ ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಚಿರಋಣಿಯಾಗಿದ್ದೇನೆ. ಪಕ್ಷಕ್ಕೆ ಹೆಸರು ತರುವ ರೀತಿಯಲ್ಲಿ ಕೆಲಸ ಮಾಡಲಿದ್ದೇನೆ ಎಂದು ಅರವಿಂದಕುಮಾರ ಅರಳಿ ಪ್ರತಿಕ್ರಿಯಿಸಿದರು. ಜಿಪಂ ಸದಸ್ಯ ವಿದ್ಯಾಸಾಗರ ಶಿಂಧೆ ಮತ್ತು
ರಾಜಶೇಖರ ಪಾಟೀಲ ಅಷ್ಟೂರ ಇದ್ದರು.