ನವದೆಹಲಿ: ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಹೀನಾಯ ಸೋಲನ್ನನುಭವಿಸಿದ ಬೆನ್ನಲ್ಲೇ ಗುರುವಾರ ಟಿಡಿಪಿಯ ನಾಲ್ವರು ರಾಜ್ಯಸಭಾ ಸದಸ್ಯರು ರಾಜೀನಾಮೆ ಸಲ್ಲಿಸಿದ್ದು, ನಾಲ್ವರು ಬಿಜೆಪಿಗೆ ಸೇರುವ ಸಾಧ್ಯತೆ ಇದ್ದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ತೆಲುಗು ದೇಶಂನ ನಾಲ್ವರು ರಾಜ್ಯಸಭಾ ಸದಸ್ಯರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿರುವುದಾಗಿ ವರದಿ ಹೇಳಿದೆ.
ಪ್ರಸ್ತುತ ರಾಜ್ಯಸಭೆಯಲ್ಲಿ ಟಿಡಿಪಿಯ ಆರು ಮಂದಿ ರಾಜ್ಯಸಭಾ ಸದಸ್ಯರಾಗಿದ್ದು, ಅದರಲ್ಲಿ ಇದೀಗ ನಾಲ್ವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ಗುರುವಾರ ಟಿಡಿಪಿಯ ಟಿಜಿ ವೆಂಕಟೇಶ್, ವೈಎಸ್ ಚೌದರಿ, ಜಿಎಂ ರಾವ್ ಮತ್ತು ಸಿಎಂ ರಮೇಶ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರ ಉತ್ತಮ ನಾಯಕತ್ವ ಹಾಗೂ ಅವರಿಂದ ಪ್ರಭಾವಿತರಾಗಿ ನಾವು ಬಿಜೆಪಿ ಜೊತೆ ಸೇರ್ಪಡೆಗೊಳ್ಳುತ್ತಿರುವುದಾಗಿ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದ ಪತ್ರದಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.