ಮೈಸೂರು: ಆಷಾಢಮಾಸದ ಕಡೆಯ ಶುಕ್ರವಾರದ ಹಿನ್ನೆಲೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿದ ಸಹಸ್ರಾರು ಆಕ್ತರು ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿಬಾವ ಮೆರೆದರು.
ಆಷಾಢ ಮಾಸದ ಕಡೇ ಶುಕ್ರವಾರದ ಅಂಗವಾಗಿ ಮುಂಜಾನೆಯಿಂದಲೇ ಅಸಂಖ್ಯಾತ ಭಕ್ತರು ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಬೆಳಗ್ಗೆ 5.30ರಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಮುಂಜಾನೆ 3.30ರಿಂದಲೇ ದೇವಿಗೆ ರುದ್ರಾಭಿಷೇಕ, ಪಂಚಾಮೃತಾ ಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.
ಬಳಿಕ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಾನಾ ಕಡೆಗಳಿಂದ ಆಗಮಿಸಿದ್ದ ಭಕ್ತರು ಸರತಿ ಸಾಲಿನಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಆಷಾಢಮಾಸದ 4ನೇ ಶುಕ್ರವಾರದ ಪ್ರಯುಕ್ತ ಚಾಮುಂಡೇಶ್ವರಿ ದೇವಸ್ಥಾನವನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ದೇವಾಲಯದ ಒಳ ಆವರಣವನ್ನು ಚೆಂಡು ಹೂ, ಗುಲಾಬಿ, ಸೇವಂತಿಗೆ, ತಾವರೆ ಸೇರಿದಂತೆ ಇನ್ನಿತರೆ ಹೂವುಗಳಿಂದ ಅಲಂಕರಿಸಲಾಗಿತ್ತು.
ಬೆಟ್ಟಕ್ಕೆ ಆಗಮಿಸಿದ್ದ ಭಕ್ತರಿಗಾಗಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಬಾತು, ಕೇಸರಿಬಾತ್, ಪುಳಿಯೊಗರೆ, ಮೊಸರನ್ನ ಮೊದಲಾದ ಪ್ರಸಾದ ವಿತರಣೆ ಮಾಡಲಾಯಿತು. ಅಲ್ಲದೆ, ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ದಾಸೋಹ ಭವನದಲ್ಲಿ ಎಂದಿನಂತೆ ಅನ್ನಸಂತರ್ಪಣೆ ನಡೆಸಲಾಯಿತು. ಆಷಾಢ ಶುಕ್ರವಾರದ ನಿಮಿತ್ತ ಚಾಮುಂಡಿಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ದೇವಾಲಯಗಳಲ್ಲೂ ಪೂಜೆ: ಆಷಾಢ ಮಾಸದ ಕೊನೆ ಶುಕ್ರವಾರದ ಹಿನ್ನೆಲೆಯಲ್ಲಿ ನಗರದ ವಿವಿಧ ಕಡೆಗಳಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಇನ್ನಿತರ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಕೈಂಕರ್ಯಗಳು ನಡೆಯಿತು. ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸುವ ಮೂಲಕ ಪುನೀತರಾದರು. ಇನ್ನೂ ಹಲವು ದೇವಾಲಯಗಳಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.