Advertisement

ಮಹಾಲಕ್ಷ್ಮೀ  ಅಲಂಕಾರದಲ್ಲಿ ಕಂಗೊಳಿಸಿದ ನಾಡದೇವತೆ

05:43 PM Jul 08, 2023 | Team Udayavani |

ಮೈಸೂರು: ತುಂತುರು ಮಳೆ, ಮೈ ಕೊರೆಯುವ ಚಳಿಯಲ್ಲೂ ಸಹ ಸ್ರಾರು ಭಕ್ತರು 3ನೇ ಆಷಾಢ ಶುಕ್ರವಾರ ಅಂಗ ವಾಗಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪುನೀತರಾದರು.

Advertisement

ಗುರುವಾರ ದಿನಿವಿಡೀ ಸುರಿದ ಮಳೆ ಶುಕ್ರವಾರ ಕೊಂಚ ಬಿಡುವು ನೀಡಿತ್ತು. ಬೆಳಗ್ಗೆ 8 ಗಂಟೆಯಾದರೂ ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆ ಯಿಂದಲೇ ಬೆಟ್ಟದತ್ತ ಧಾವಿಸಿ ಬಂದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಅಮ್ಮನ ದರ್ಶನ ಪಡೆದು ಧನ್ಯರಾದರು. ಜಿಲ್ಲೆ, ರಾಜ್ಯ, ಹೊರರಾಜ್ಯದ ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ಕೆಲವರು, ಮೆಟ್ಟಿಲುಗಳ ಮೂಲಕ ಬಂದರೆ ಇನ್ನು ಕೆಲವರು ಸಾರಿಗೆ ಬಸ್‌ನಲ್ಲಿ ಬೆಟ್ಟಕ್ಕೆ ಆಗಮಿಸಿದರು. ಉಚಿತ ಪ್ರವೇಶ, 50 ರೂ, 100 ರೂ, 300 ರೂ.ಗಳ ಸರತಿ ಸಾಲಿನಲ್ಲಿ ನಿಂತು ಸಾವದಾನವಾಗಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ಸರತಿ ಸಾಲಿನುದ್ದಕ್ಕೂ ಚಾಮುಂಡೇಶ್ವರಿಯ ಜಯಘೋಷಗಳು ಮೊಳಗಿದವು.

ದೇವಿಗೆ ವಿಶೇಷ ಪೂಜೆ: ಮುಂಜಾನೆ ಮೂರು ಗಂಟೆ ಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲು ಚಾಮುಂಡೇಶ್ವರಿ ವಿಗ್ರಹವನ್ನು ಶುದ್ಧಗೊಳಿಸಿ, ಬಳಿಕ ವಿಶೇಷವಾಗಿ ಅಲಂಕಾರ ಮಾಡಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕು ಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ಅಭಿಷೇಕ ನೆರವೇರಿಸಲಾಯಿತು. ರಾತ್ರಿ 9 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದರ್ಶನದ ವೇಳೆ ಯಾವುದೇ ನೂಕು ನುಗ್ಗಲಿಗೆ ಅವಕಾಶವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ವಿಶೇಷ ಮಹಾಲಕ್ಷ್ಮೀ ಅಲಂಕಾರ: ಎಂದಿನಂತೆ ಮೂರನೇ ಆಷಾಢ ಶುಕ್ರವಾರವೂ ದೇವಾಲಯದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಯಿ ಚಾಮುಂಡೇಶ್ವರಿ ವಿಶೇಷ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು. ದೇವಾಲಯದ ಇಡೀ ಆವರಣ ವಿಶೇಷ ಹೂಗಳಿಂದ ಕಂಗೊಳಿಸುತ್ತಿತ್ತು. ಪ್ರವೇಶ ದ್ವಾರದಿಂದ ದೇವಸ್ಥಾನದ ಗರ್ಭಗುಡಿವರೆಗೆ ಹೂವುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಆರ್ಕಿಡ್‌ ಹೂ, ಗುಲಾಬಿ, ಸೇವಂತಿಗೆ, ಚೆಂಡು ಹೂ ಸೇರಿದಂತೆ ನಾನಾ ಬಗೆಯ ಹೂಗಳಿಂದ ದೇವಸ್ಥಾನದ ಆವರಣವನ್ನು ಸಿಂಗರಿಸಲಾಗಿತ್ತು. ಹೂವಿನಿಂದ ಚಾಮುಂಡೇಶ್ವರಿ ಅಮ್ಮ ಎಂದು ಅಲಂಕಾರ ಮಾಡಲಾಗಿತ್ತು. ಸಾರ್ವಜನಿಕರು ತಮ್ಮ ಮೊಬೈಲ್‌ಗ‌ಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಕಳೆದ ಎರಡು ವಾರಗಳಿಗೆ ಹೋಲಿಸಿದರೆ 3ನೇ ವಾರದ ಹೂವಿನ ಅಲಂಕಾರ ಅತ್ಯಂತ ಸುಂದರವಾಗಿತ್ತು.

ಪ್ರಸಾದ ವಿತರಣೆ: ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಸ್ಥಳದಲ್ಲಿ ದೇವುಬಾಯಿ ರಾಜಾ ವೈದ್ಯಪಂಡಿತ್‌ ಪಿ.ಎಚ್‌.ಚಂದ್ರಬಾನ್‌ ಸಿಂಗ್‌ ಮೆಮೋರಿಯಲ್‌ ಹರ್ಬಲ್‌ ಗಾರ್ಡನ್‌ ಮತ್ತು ಹೋಲಿಸ್ಟಿಕ್‌ ಹಾಸ್ಪಿಟಲ್‌ ಕಾಂಪ್ಲೆಕ್ಸ್‌ ಟ್ರಸ್ಟ್‌ ವತಿಯಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಕೇಸರಿಬಾತ್‌, ಬಾತ್‌, ಅಲಸಂದೆ ಹುಳಿ, ಅನ್ನ ಸಾಂಬಾರ್‌, ಮೊಸರು ವಿತರಿಸಲಾಯಿತು. ಬೆಳಗ್ಗೆ 8ರಿಂದ ರಾತ್ರಿ 7 ಗಂಟೆಯವರೆಗೂ ಪ್ರಸಾದ ನೀಡಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next