Advertisement

ಕಡೆ ಆಷಾಢ ಶುಕ್ರವಾರ: ಬೆಟ್ಟಕ್ಕೆ ಭಕ್ತರ ದಾಂಗುಡಿ

04:14 PM Jul 15, 2023 | Team Udayavani |

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರ ಅಂಗವಾಗಿ ಲಕ್ಷಾಂತರ ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ದುರ್ಗೆಯ ದರ್ಶನ ಪಡೆದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸುಸಂಪನ್ನವಾಯಿತು. ಮುಂಜಾನೆಯಿಂದಲೇ ದೇವಿಯ ದರ್ಶ ನಕ್ಕೆ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು.

Advertisement

ಒಂದೆಡೆ ಹಿಮ ಮಳೆ ಸುರಿಯುತ್ತಿದ್ದರೆ, ಮತ್ತೂಂದೆಡೆ ತಾಯಿಯ ಜಯಘೋಷಗಳು ಮೊಳಗುತ್ತಿದ್ದವು. ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳಿ ದರ್ಶನ ಪಡೆದರೆ, ಮಾಜಿ ಶಾಸಕರಾದ ಅನಿತಾ ಕುಮಾರ ಸ್ವಾಮಿ, ಎಲ್‌.ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಮುಂಜಾನೆಯಿಂದಲೇ ಪೂಜೆ: ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನ ದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿ ಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೂಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10 ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ನಾಗಲಕ್ಷ್ಮೀ ಅಲಂಕಾರ: ಕಳೆದ ಮೂರು ವಾರಗಳಂತೆ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಅಲಂಕೃತಗೊಂಡಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು.

ನಗರದೆಲ್ಲೆಡೆ ಪ್ರಸಾದ ವಿತರಣೆ : ಕಡೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ರಸ್ತೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಗ್ರಹಾರ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಚಾಮರಾಜ ಜೋಡಿ ರಸ್ತೆ, ಎಂ.ಜಿ.ರಸ್ತೆ, ಕೆ.ಜಿ.ಕೊಪ್ಪಲು, ಒಂಟಿಕೊಪ್ಪಲು, ಇಲವಾಲ, ಹೂಟಗಳ್ಳಿ, ಹಿನ ಕಲ್‌, ಆಲನಹಳ್ಳಿ, ಹೆಬ್ಟಾಳ, ಕುಂಬಾರಕೊಪ್ಪಲು ಸೇರಿದಂತೆ ನಗರದ ಹಲವೆಡೆ ಪ್ರಸಾದ ವಿತರಣೆ ಮಾಡಲಾಯಿತು. ಸಾರ್ವಜನಿಕರು ಸರತಿ ಸಾಲಿನಲ್ಲಿ ಪ್ರಸಾದ ಸ್ವೀಕರಿಸಿದರು.

Advertisement

ಹರಕೆ ತೀರಿಸಿದ ಲಕ್ಷಾಂತರ ಭಕ್ತರು: ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್‌ ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು. ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಬಹುಮಹಡಿ ಪಾರ್ಕಿಂಗ್‌ ಸ್ಥಳದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 7ರಿಂದ ಪ್ರಾರಂಭವಾದ ಪ್ರಸಾದ ವಿತರಣೆ ರಾತ್ರಿಯವರೆಗೂ ನಡೆಯಿತು.

ಸುತ್ತೂರು ಮಠದಲ್ಲಿ ಪ್ರಸಾದ ವಿತರಣೆ: ಆಷಾಢ ಮಾಸದ ಕಡೆಯ ಶುಕ್ರವಾರದ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಹೋಗುವ ಸಾವಿರಾರು ಭಕ್ತರು ಮಠಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ವತಃ ತಾವೇ ಪ್ರಸಾದ ವಿತರಿಸಿದರು. ಆಷಾಢ ಮಾಸದ ಕೊನೆಯ ಶುಕ್ರವಾರದ ಹಿನ್ನಲೆಯಲ್ಲಿ ಶ್ರೀ ಮಠದಿಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಒಳಿತು ಮಾಡಲಿ ಎಂದು ಆಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next