ಬೆಂಗಳೂರು: ನೈಸ್ ಹಗರಣದ ಸುಳಿಯಲ್ಲಿ ಸಿಲುಕಿದ್ದ ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದೆಂಬ ವಿರೋಧದ ನಡುವೆಯೇ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಅಶೋಕ್ ಖೇಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದೆಂದು ಧರಂಸಿಂಗ್ ಪುತ್ರ ಅಜಯ್ ಸಿಂಗ್, ಶಾಸಕರಾದ ಮುನಿರತ್ನ, ಭೈರತಿ ಬಸವರಾಜು ಹಾಗೂ ಎಸ್ ಟಿ ಸೋಮಶೇಖರ್ ಸೇರಿದಂತೆ ಬೆಂಗಳೂರಿನ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು.
ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಖೇಣಿ ವಿರುದ್ಧ ನೈಸ್ ಸೇರಿದಂತೆ ಹಲವು ಹಗರಣಗಳ ಆರೋಪವಿದೆ. ಹೀಗಾಗಿ ಖೇಣಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟ ಉಂಟಾಗಲಿದೆ ಎಂದು ಕಾಂಗ್ರೆಸ್ ಶಾಸಕರು ದೂರಿನಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಕಾಂಗ್ರೆಸ್ ಶಾಸಕರೇ ಖೇಣಿ ವಿರುದ್ಧ ತಿರುಗಿ ಬಿದ್ದಿದ್ದರು. ನೈಸ್ ಹಗರಣದ ಬಗ್ಗೆ ಸದನ ಸಮಿತಿ ವರದಿ ನೀಡಿತ್ತು. ಆದರೆ ವರದಿ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲವಾಗಿತ್ತು. ಜೆಡಿಎಸ್ ಪಕ್ಷ ನೈಸ್ ಹಗರಣದ ಬಗ್ಗೆ ಹೋರಾಟ ನಡೆಸಿತ್ತು. ಇದೀಗ ನೈಸ್ ಹಗರಣದ ಬಗ್ಗೆ ವಾಕ್ಸಮರಕ್ಕೆ ಇಳಿಯುತ್ತಿದ್ದ ಕಾಂಗ್ರೆಸ್ ಪಕ್ಷವೇ ಖೇಣಿಯನ್ನು ಪಕ್ಷಕ್ಕೆ ಬರಮಾಡಿಕೊಂಡಿರುವುದು ಚರ್ಚೆ, ಟೀಕೆಗೆ ಕಾರಣವಾಗಿದೆ.