ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ವಿರುದ್ಧವೇ ಕೆಲಸ ಮಾಡಿದ ಆರೋಪ ಹೊತ್ತವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಡುವೆ ಜಟಾಪಟಿ ನಡೆದಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಬ್ಬರು ನಾಯಕರು ಪರಸ್ಪರ ಜಗಳವಾಡಿಕೊಂಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಪಾಲಿಕೆ ಮಾಜಿ ಸದಸ್ಯ ಗೋಪಿ ಹಾಗೂ ಪಾಲಿಕೆ ಪಕ್ಷೇತರ ಸದಸ್ಯೆ ಮಮತಾ ಅವರ ಪತಿ ಶರವಣ ಅವರು ಕೆಲಸ ಮಾಡಿದ್ದರು. ಬಿಜೆಪಿಯಿಂದಲೇ ಒಂದು ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದ ಗೋಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು.
ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರ್ಯಾಲಿ ವೇಳೆ ಪ್ರತಿರೋಧ ತೋರಿದ್ದರು. ಇನ್ನೊಂದೆಡೆ ಶಿವಾಜಿನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶರವಣ ಅವಕಾಶ ಸಿಗದ ಕಾರಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದರು. ಇದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಆಕ್ರೋಶಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.
ಇದೀಗ ಸಂಸದ ಪಿ.ಸಿ.ಮೋಹನ್ ಅವರು ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಇಬ್ಬರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ಆರ್.ಅಶೋಕ್ ಅವರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೆಂಡಾಮಂಡಲರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಪಕ್ಷದ ವಿರುದ್ಧ ಕೆಲಸ ಮಾಡಿದವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ನಿಷ್ಠಾವಂತ ಕಾರ್ಯಕರ್ತರಿಗೆ ಅಪಮಾನದಂತಾಗಲಿದೆ.
ಹಾಗಾಗಿ ಒಂದೊಮ್ಮೆ ಪಕ್ಷ ಸೇರ್ಪಡೆ ಮಾಡಿಕೊಂಡರೆ ತಾವು ತಟಸ್ಥರಾಗಿ ಉಳಿಯುವುದಾಗಿ ಎಚ್ಚರಿಕೆ ನೀಡಿದರು ಎಂದು ಗೊತ್ತಾಗಿದೆ. ಇದರಿಂದ ಗಲಿಬಿಲಿಗೊಂಡ ಹಿರಿಯ ನಾಯಕರು ವಾಗ್ವಾದ ತಾರಕಕ್ಕೇರದಂತೆ ಪರಿಸ್ಥಿತಿ ನಿಭಾಯಿಸಿದರು. ಜತೆಗೆ ಪಕ್ಷ ಸೇರ್ಪಡೆ ವಿಚಾರವನ್ನು ಅಲ್ಲಿಗೆ ಮೊಟಕುಗೊಳಿಸಿ ಇತರೆ ವಿಚಾರಗಳ ಬಗ್ಗೆ ಚರ್ಚಿಸಿ ಮುಕ್ತಾಯಗೊಳಿಸಿದು ಎಂದು ಹೇಳಲಾಗಿದೆ.