Advertisement

ರಾಮನಗರದಲ್ಲಿ ಶೀಘ್ರದಲ್ಲೇ 145 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಚಾಲನೆ: ಅಶ್ವಥನಾರಾಯಣ

05:43 PM Nov 01, 2022 | Team Udayavani |

ರಾಮನಗರ: ಜಿಲ್ಲೆಯ ರಾಮನಗರ, ಚನ್ನಪಟ್ಟಣ ಕನಕಪುರ ನಗರಸಭೆಗಳು ಮತ್ತು ಮಾಗಡಿ, ಬಿಡದಿ ಪುರಸಭೆಗಳ ವ್ಯಾಪ್ತಿಯಲ್ಲಿ ಇನ್ನು ಎರಡು ವಾರಗಳಲ್ಲಿ 145 ಕೋಟಿ ರೂ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Advertisement

ಮಂಗಳವಾರ ಇಲ್ಲಿ ಅವರು 67ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪೌರಕಾರ್ಮಿಕರು ಸೇರಿದಂತೆ ದುರ್ಬಲರಿಗೆ ವಸತಿ ಸೌಕರ್ಯವನ್ನು ಹಾಗೂ ಇನ್ನಿತರ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದರ ಜೊತೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಅಡಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲೂ 10 ಕೋಟಿ ಮೊತ್ತದ ಕಾಮಗಾರಿಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯೋದ್ಯಮಗಳ ಬೆಳವಣಿಗೆಗೆ ವಿಪುಲ ಅವಕಾಶಗಳಿವೆ. ಇವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈಗಾಗಲೇ ಆಸಕ್ತ ಉದ್ಯಮಿಗಳ ಮತ್ತು ಹೂಡಿಕೆದಾರರ ಮಹತ್ವದ ಸಭೆಯನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಕೈಗಾರಿಕೆ, ಆರೋಗ್ಯ, ಶಿಕ್ಷಣ, ಮತ್ತು ಕೃಷಿ ಕ್ಷೇತ್ರಗಳ ಸುಸ್ಥಿರ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯದ ಬಹುತೇಕ ಕಾಮಗಾರಿಗಳು ಭರದಿಂದ ಸಾಗಿದ್ದು ಮುಗಿಯುವ ಹಂತದಲ್ಲಿವೆ ಎಂದು ಅವರು ವಿವರಿಸಿದರು.

Advertisement

ರಾಮನಗರದಲ್ಲಿ ಆರೋಗ್ಯ ವಿಶ್ವವಿದ್ಯಾಲಯ ಸ್ಥಾಪಿಸುವ ಮಸೂದೆಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಒಪ್ಪಿಗೆ ಪಡೆಯಲಾಗುವುದು. ಈಗ ನಡೆಯುತ್ತಿರುವ ಈ ಸಂಬಂಧದ ಕಾಮಗಾರಿಯು ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ ಎಂದು ಅವರು ವಿವರಿಸಿದರು.

650 ಆಸ್ಪತ್ರೆಗಳ ಸಾಮರ್ಥ್ಯಕ್ಕೆ ಏರಿಸಿರುವ ಜಿಲ್ಲಾ ಆಸ್ಪತ್ರೆಯಲ್ಲಿ 100 ಹಾಸಿಗೆಗಳನ್ನು ಮಹಿಳೆಯರು ಮತ್ತು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗುವುದು.  ಅಲ್ಲದೆ ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು 70 ಕೋಟಿ ರೂ. ವೆಚ್ಚದಲ್ಲಿ ‘ರೀತಿ’ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಶೈಕ್ಷಣಿಕ ಕ್ರಾಂತಿಯನ್ನು ಸಾಧಿಸುವ ಗುರಿಯುಳ್ಳ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಜಿಲ್ಲೆಯಲ್ಲಿನ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ಬಂದಿದೆ. ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬರಲಿರುವ ಮುಕ್ತ ವಿ.ವಿ.ದ ಪ್ರಾದೇಶಿಕ ಕೇಂದ್ರದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ನುಡಿದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಕಿಸಾನ್ ಸಮ್ಮಾನ್ ಯೋಜನೆ ಅಡಿ ಜಿಲ್ಲೆಯ 1.20 ಲಕ್ಷ ರೈತರಿಗೆ ತಲಾ 10 ಸಾವಿರ ರೂಪಾಯಿಗಳಂತೆ 300 ಕೋಟಿ ರೂ.ಗಳಿಗೂ ಹೆಚ್ಚು ನೆರವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಅವರು ಅಂಕಿಅಂಶ ಒದಗಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಸರಕಾರಿ ಶಾಲೆಗಳ ಬಲವರ್ಧನೆಗೆ ಈಗಾಗಲೇ ಗುಣಮಟ್ಟದ ಮೂರು ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಹಾರೋಹಳ್ಳಿಯಲ್ಲಿ  5ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಾಡಲಾಗುವುದು. ಇದಕ್ಕಾಗಿ 912 ಎಕರೆ ಜಮೀನನ್ನು ಮೀಸಲಿಡಲಾಗಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಜಿಪಂ ಸಿಇಒ ದಿಗ್ವಿಜಯ್, ಎಸ್ಪಿ ಸಂತೋಷ್ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next