ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡುಗೆ ವಿಚಾರಣೆಗೆ ಹಾಜರಾಗುವಂತೆ ವಿ.ವಿ ಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿ ಕೊಳ್ಳಲಾಗಿದೆ. ಇದೀಗ ಆರೋಪಿಗೆ ಮಂಗಳವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಮನವಿ ಮೇರೆಗೆ ಗುರಪ್ಪ ನಾಯ್ಡು ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದ ತನಿಖಾ ಹೊಣೆಯನ್ನು ವಿ.ವಿ.ಪುರ ಠಾಣೆಗೆ ವರ್ಗಾವಣೆ ಗೊಳಿ ಸಲಾಗಿದೆ.
ರಾಜಕೀಯವಾಗಿ ಪ್ರಭಾವಿಯಾಗಿರುವ ಗುರಪ್ಪ ನಾಯ್ಡು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಅವರ ಶಾಲೆ ಸಹ ಠಾಣೆ ವ್ಯಾಪ್ತಿಯಲ್ಲಿದೆ. ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂಬ ಕಾರಣಕ್ಕೆ ಪ್ರಕರಣವನ್ನು ಬೇರೆ ಠಾಣೆಗೆ ವರ್ಗಾಯಿಸಬೇಕು ಎಂದು ಸಂತ್ರಸ್ತೆ ದಕ್ಷಿಣ ವಿಭಾಗದ ಡಿಸಿಪಿಗೆ ಮನವಿ ಮಾಡಿದ್ದರು. ಈ ಮನವಿ ಮೇರೆಗೆ ವಿ.ವಿ.ಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.