Advertisement

ಅನಿಷ್ಟ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಿ

04:36 PM Mar 29, 2018 | |

ದಾವಣಗೆರೆ: ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಬಾಲ ಕಾರ್ಮಿಕತೆ ಒಳಗೊಂಡಂತೆ ಅನಿಷ್ಟ ಪದ್ಧತಿಗಳ ನಿರ್ಮೂಲನೆ ಬಗ್ಗೆ ಜನಸಾಮಾನ್ಯರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾ ಧೀಶ ಹಾಗೂ
ಮುಖ್ಯನ್ಯಾಯಿಕ ದಂಡಾಧಿಕಾರಿ ಸಾಬಪ್ಪ ಬಿ. ಮೇಲಗಲ್‌ ಹೇಳಿದ್ದಾರೆ.

Advertisement

ಬುಧವಾರ, ತುಂಗಭದ್ರಾ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಜನರಿಗೆ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ)ಯಡಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986 ಹಾಗೂ 2016ರ ತಿದ್ದುಪಡಿಯ ಕುರಿತು ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಟ್ರೇಡ್‌ ಯೂನಿಯನ್‌ ಪದಾಧಿಕಾರಿಗಳು ಹಾಗೂ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿಗೆ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಹಳ್ಳಿಗಳಲ್ಲಿನ ಎಲ್ಲ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. ಹಾಗಾಗಿ ಅವರು ಅನಿಷ್ಟ ಪದ್ಧತಿ ಮೂಲೋತ್ಪಾಟನೆಯ ಕುರಿತು ಅತ್ಯಂತ ಪರಿಣಾಮಕಾರಿಯಾಗಿ ಜನರಿಗೆ ತಿಳಿವಳಿಕೆ ನೀಡಬೇಕು ಎಂದರು.

ಬಡತನ, ಅನಕ್ಷರತೆ ಇತರೆ ಕಾರಣಗಳಿಂದ ಫೋಷಕರು ಮಕ್ಕಳನ್ನು ಶಾಲೆಗೆ ಬಿಟ್ಟು ದುಡಿಯಲು ಕಳುಹಿಸುತ್ತಿರುವುದರಿಂದ ಎಲ್ಲ ರಂಗಗಳಲ್ಲಿ ಬಾಲ ಕಾರ್ಮಿಕರನ್ನು ಕಾಣಬಹುದು. ಇದರಿಂದ ಮಕ್ಕಳು ಹಾಗೂ ಸಮಾಜಕ್ಕೆ ದುಷ್ಪರಿಣಾಮ ಉಂಟಾಗುತ್ತದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಸರ್ಕಾರ ಜಾರಿಗೆ ತಂದಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಸೇರಿದಂತೆ ಸರ್ಕಾರದ ಸಾಕಷ್ಟು ಯೋಜನೆಗಳ ಕುರಿತು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜನರಿಗೆ ಜಾಗೃತಿ ಮೂಡಿಸುವಂತಾಗಬೇಕು. ಸಾಮಾಜಿಕ ಅನಿಷ್ಟ ಪದ್ಧತಿಗಳ ಮೂಲೋತ್ಪಾಟನೆಯಲ್ಲಿ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಿದೆ. ಆ ಕಾರ್ಯವನ್ನು ಯಶಸ್ವಿಯಾಗಿ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ಅನಕ್ಷರತೆ, ಬಡತನ ಮತ್ತು ಕೌಟುಂಬಿಕ ಕಲಹ ಸೇರಿದಂತೆ ಅನೇಕ ಅಂಶಗಳು ಬಾಲಕಾರ್ಮಿಕ ಪದ್ಧತಿಗೆ ಕಾರಣ. ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲೇಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

Advertisement

ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ ಮಾತನಾಡಿ, ಸಮಾಜ ಮತ್ತು ಸರ್ಕಾರದ ನಡುವಿನ ಕೊಂಡಿಯಂತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನಸ್ಸು ಮಾಡಿದರೆ ಅನಿಷ್ಟ ಪದ್ಧತಿ ನಿರ್ಮೂಲನೆ ಸಾಧ್ಯ ಎಂದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಇತರರು ಇದ್ದರು. ಬಾಲಕಾರ್ಮಿಕ ಯೋಜನಾ ಸಂಸ್ಥೆ ಯೋಜನಾ ನಿರ್ದೇಶಕ ಪ್ರಸನ್ನ ನಿರೂಪಿಸಿದರು.  ಕಾರ್ಮಿಕ ಅಧಿಕಾರಿ ಇಬ್ರಾಹಿಂಸಾಬ್‌ ವಂದಿಸಿದರು.

ದಾವಣಗೆರೆ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವುದು ಕಾರ್ಮಿಕ ಇಲಾಖೆ ಉದ್ದೇಶ. ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನವಸತಿ ಇರುವೆಡೆ ಪೋಸ್ಟರ್‌, ಗೋಡೆಬರಹ, ಕರಪತ್ರ ಹಂಚುವಿಕೆ ಮತ್ತು ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ. ಜಿಲ್ಲಾ ಮಟ್ಟದ ಜಾಗೃತಿ ರಥವು 234 ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಅನಿಷ್ಟ ಪದ್ಧತಿಗಳ ನಿರ್ಮೂಲನೆ ಅನಿವಾರ್ಯ. ಇಲ್ಲವಾದಲ್ಲಿ ಮುಂದೆ ಅವರಂತಹವರು ಸಮಾಜಕ್ಕೆ ಹೊರೆಯಾಗಿ ಪರಿಣಮಿಸುತ್ತಾರೆ. ನಾವೆಲ್ಲರೂ ಸೇರಿ ಬಾಲ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಬೇಕಿದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಿಸುವಲ್ಲಿ ಮುಖ್ಯ ಪಾತ್ರ ವಹಿಸಬೇಕು ಎಂದು ಸಹಾಯಕ ಕಾರ್ಮಿಕ ಆಯುಕ್ತ ಡಿ. ಜಿ. ನಾಗೇಶ್‌ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next