ಬೆಂಗಳೂರು: ಪರಿಸರ ಸಮತೋಲನ ಕಾಯ್ದುಕೊಳ್ಳಲು ಎಲ್ಲರೂ ಕೈಜೋಡಿಸಬೇಕಿದೆ ಎಂದು ಯುವರಾಜ ಯದುವೀರ ಕೃಷ್ಣದತ್ತ ಒಡೆಯರ್ ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ “ಸುವರ್ಣಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಒಂದೆಡೆ ಪರಿಸರ ಸಂರಕ್ಷಣೆ ಕಾರ್ಯಗಳು ಸದ್ದಿಲ್ಲದೆ ನಡೆಯುತ್ತಿವೆ. ಆದರೆ, ಅದಕ್ಕಿಂತ ಸುಮಾರುಪಟ್ಟು ವೇಗವಾಗಿ ಪರಿಸರಕ್ಕೆ ಮಾರಕವಾಗುವಂತಹ ಚಟುವಟಿಕೆಗಳು ಮುಂದುವರಿದಿವೆ.
ಆದ್ದರಿಂದ ಮುಂದಿನ ಜನಾಂಗಕ್ಕಾಗಿ ನಾವು ನಮ್ಮ ಸುತ್ತಮುತ್ತಲಿನ ಪ್ರಕೃತಿ ಹಾಗೂ ನೂರಾರು ವರ್ಷಗಳ ಇತಿಹಾಸವಿರುವ ಸಂಸ್ಕೃತಿ, ಪರಂಪರೆಯನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಆದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಯೋಗಿನಿ ಮಾತಾಜಿ, ಸುಮಂಗಲಿ ಸೇವಾಶ್ರಮದ ಎಸ್.ಜಿ.ಸುಶೀಲಮ್ಮ, ಕವಿ ಡಾ.ದೊಡ್ಡರಂಗೇಗೌಡ, ಬೆಂಗಳೂರು ದೂರದರ್ಶನ ಕೇಂದ್ರದ ಮಾಜಿ ನಿರ್ದೇಶಕ ಡಾ. ಮಹೇಶ್ ಜೋಶಿ,
ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಅಧ್ಯಕ್ಷ ಎಂ. ಶ್ರೀನಿವಾಸಬಾಬು ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಕಲಾವಿದರಾದ ರಿಶಬ್ ಶೆಟ್ಟಿ, ವಸಿಷ್ಠ ಸಿಂಹ, ಬಿ.ಎ. ಅಶೋಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.