ಲಕ್ನೋ: ಉತ್ತರಪ್ರದೇಶದ ಬಾಂದಾ ಬಳಿ ಯುಮುನಾ ನದಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ (ಆಗಸ್ಟ್ 11) ಸಂಜೆ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ;ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ ನಾರಾಯಣಸ್ವಾಮಿ
ದೋಣಿಯಲ್ಲಿ ಬಾದಾದ ಮರಕಾ ಘಾಟ್ ನಿಂದ ಪತೇಪುರ್ ತಲುಪಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ದೋಣಿಯಲ್ಲಿ ಮಹಿಳೆಯರು, ಪುರುಷರು ಮತ್ತು ಮಕ್ಕಳು ಸೇರಿದಂತೆ 35ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಮುಳುಗು ತಜ್ಞರು ದೌಡಾಯಿಸಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಈವರೆಗೆ 20 ಶವಗಳನ್ನು ಹೊರತೆಗೆಯಲಾಗಿದೆ. ಅದರಲ್ಲಿ ಇಬ್ಬರು ಈಜು ಪರಿಣತರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ವರದಿ ಹೇಳಿದೆ.
ಭಾರೀ ಮಳೆಯಿಂದಾಗಿ ನದಿಯಲ್ಲಿ ನೀರಿನ ಮಟ್ಟವೂ ಹೆಚ್ಚಿದ್ದು, ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಯಲ್ಲಿ ಅಧಿಕ ಜನರಿದ್ದ ಪರಿಣಾಮ ದುರಂತ ಸಂಭವಿಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.