ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ಗೆ ಒಲಿದಿರುವ ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಎ.ಟಿ.ರಾಮಸ್ವಾಮಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಸಭಾಧ್ಯಕ್ಷರಾಗಿ ಕಾಂಗ್ರೆಸ್‌ನ ಹಿರಿಯ ಸದಸ್ಯ ರಮೇಶ್ ಕುಮಾರ್ ಆಯ್ಕೆಯಾಗಿರು ವುದರಿಂದ ರಾಮಸ್ವಾಮಿ
ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಜೆಡಿಎಸ್ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಎ.ಟಿ.ರಾಮಸ್ವಾಮಿ ಅವರೊಂದಿಗೆ ಎಚ್.ವಿಶ್ವನಾಥ್ ಮತ್ತು ಎಚ್.ಕೆ.ಕುಮಾರಸ್ವಾಮಿ ಅವರ ಹೆಸರುಗಳು ಕೇಳಿ ಬರುತ್ತಿವೆ. ಆದರೆ, ವಿಶ್ವನಾಥ್ ಅವರನ್ನು ಸಚಿವರನ್ನಾಗಿ ಮಾಡಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಒಲವು ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, ಎಚ್.ಕೆ.ಕುಮಾರಸ್ವಾಮಿಯವರು ಸಚಿವ ಸಂಪುಟ ಸೇರಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಹೀಗಾಗಿ,
ಎ.ಟಿ.ರಾಮಸ್ವಾಮಿಯವರು ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಒಂದೊಮ್ಮೆ ಪರಿಶಿಷ್ಟ ಜಾತಿ ಕೋಟಾದಲ್ಲಿ ಜೆಡಿಎಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಎಸ್‌ಪಿಯ ಮಹೇಶ್ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿದರೆ ಆಗ ಎಚ್.ಕೆ.ಕುಮಾರಸ್ವಾಮಿ ಅವರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸುವುದು ಕಷ್ಟವಾಗಬಹುದು.
ಅಂತಹ ಸಂದರ್ಭ ಎದುರಾದರೆ ಆಗ ರಾಮಸ್ವಾಮಿ ಬದಲು ಎಚ್.ಕೆ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಉಪಾಧ್ಯಕ್ಷ ಪಟ್ಟ ನೀಡುವ ಮೂಲಕ ಜೆಡಿಎಸ್‌ನಿಂದ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಪ್ರಯತ್ನ ನಡೆಯಬಹುದು ಎಂದು ಹೇಳಲಾಗುತ್ತಿದೆ.