ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮೇಳದ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವರ ತಂಡ ರಚಿಸಲು ಸೂಚಿಸಲಾಯಿತು.
Advertisement
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರ ತಂಡ ರಚಿಸಲಾಗುವುದು.ಈ ತಂಡವು ವಿವಿಧ ಉದ್ದಿಮೆಗಳೊಂದಿಗೆ ಚರ್ಚಿಸಿ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತರು ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಲಿದೆ ಎಂದರು.ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಪರಿಶೀಲಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ತಿಳಿಸಿದರು.
ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ರಚಿಸಿದ ಸಚಿವರ ತಂಡದಲ್ಲಿ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ| ಶರಣಪ್ರಕಾಶ ಪಾಟೀಲ್, ಡಾ| ಎಂ.ಸಿ. ಸುಧಾಕರ್, ಬಿ. ನಾಗೇಂದ್ರ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಇರಲಿದ್ದಾರೆ. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ ಹಾಗೂ ಕೈಗಾರಿಕೆಗಳ ಅಗತ್ಯದ ನಡುವಿನ ಅಂತರವನ್ನು ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸು ಮಾಡುವಂತೆ ಸಚಿವರ ತಂಡಕ್ಕೆ ಸಿಎಂ ನಿರ್ದೇಶನ ನೀಡಿದರು.