Advertisement
ಆ.26 ರಂದು ಬೆಂಗಳೂರಿನಲ್ಲಿ ವಾಜಪೇಯಿ ಶ್ರದ್ದಾಂಜಲಿ ಸಭೆ ಆಯೋಜಿಸಲಾಗಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ವಾಜಪೇಯಿ ಅವರ ಅಸ್ಥಿ ಕಳಸವನ್ನು ನಾನೇ ದೆಹಲಿಗೆ ಹೋಗಿ ಖುದ್ದಾಗಿ ತರಲಿದ್ದು ರಾಜ್ಯದ ನದಿಗಳಲ್ಲಿ ವಿಸರ್ಜನೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಮಂಡ್ಯ ಮೂಲಕ ಶ್ರೀರಂಗಪಟ್ಟಣ ತಲುಪಿ ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ವಿಸರ್ಜನೆ ಮಾಡಲಾಗುವುದು. ಕೇಂದ್ರ ಸಚಿವ ಅನಂತಕುಮಾರ್, ಸಂಸದ ಪ್ರತಾಪ್‌ಸಿಂಹ, ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಭಾಗವಹಿಸಲಿದ್ದಾರೆ. ಆ.25 ರಂದು ಐದು ಕಡೆ ಅಸ್ಥಿ ವಿಸರ್ಜನೆ ನಡೆಯಲಿದ್ದು, ಮಂಗಳೂರು-ಉಡುಪಿ ಜಿಲ್ಲೆಯ ನೇತ್ರಾವತಿ ನದಿಯಲ್ಲಿ ಉಪ್ಪಿನಂಗಡಿ ಬಳಿ ಅಸ್ಥಿ ವಿಸರ್ಜನೆ ಮಾಡಲಾಗುವುದು. ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್‌ಕುಮಾರ್ ಕಟೀಲ್, ಶಾಸಕ ಸಿ.ಟಿ.ರವಿ ಹಾಗೂ ಧಾರವಾಡ-ಹುಬ್ಬಳ್ಳಿ, ಗದಗ, ಹಾವೇರಿ ಜಿಲ್ಲೆಯ ವ್ಯಾಪ್ತಿಯ ಮಲಪ್ರಭಾ ನದಿಯಲ್ಲಿ ಅಸ್ಥಿ ವಿಸರ್ಜನೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ಸಿ.ಎಂ.ಉದಾಸಿ, ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ.
Related Articles
Advertisement
ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯಲ್ಲಿ ಹೊನ್ನಾವರ ಬಳಿ ಅಸ್ಥಿ ವಿಸರ್ಜನೆಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜಿ.ನಾಯ್ಕ ಹಾಗೂ ಶಿವಮೊಗ್ಗ ಜಿಲ್ಲೆಯ ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆಗೆ ಶಾಸಕ ಆಯನೂರು ಮಂಜುನಾಥ್, ಮಾಜಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.