ಹೊಸದಿಲ್ಲಿ: ಗುರುವಾರ ಸಂಜೆ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ , ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ.
ಕೃಷ್ಣ ಮೆನನ್ ಮಾರ್ಗ್‌ನಲ್ಲಿರುವ ಅಟಲ್ ಜೀ ಅವರ ನಿವಾಸದಿಂದ ಪಾರ್ಥಿವ ಶರೀರವನ್ನು ಪುಷ್ಪಾಲಂಕೃತ ಸೇನಾ ವಾಹನದಲ್ಲಿ ಮಿಲಿಟರಿ ಬ್ಯಾಂಡ್ ಮತ್ತು ಪಥಸಂಚಲನದೊಂದಿಗೆದೀನ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಗೆ ತಂದು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿಜೆಪಿ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹೊದ್ದು ಮಲಗಿದ್ದ ಮೇರು ನಾಯಕನಿಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಅಮಿತ್ ಶಾ ಸೇರಿದಂತೆ ಹಲವು ಸಚಿವರು ನಮನ ಸಲ್ಲಿಸಿದರು. ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 1.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದೇಶದ ವಿವಿಧ ರಾಜ್ಯಗಳಿಂದ ಬಿಜೆಪಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು , ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕರು ಸೇರಿದಂತೆ ಸಾವಿರಾರು ಮಂದಿ ಬಿಜೆಪಿ ಕಚೇರಿಗೆ ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ರಸ್ತೆಯ ಇಕ್ಕೆಲದಲ್ಲಿ ನಿಂತಿರುವ ಸಾವಿರಾರು ಮಂದಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು , ವ್ಯಾಪಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣ ಮೆನನ್ ಮಾರ್ಗ, ತುಘಲಕ್ ರಸ್ತೆ, ಅಕ್ಬರ್ ರಸ್ತೆ , ಮಾನ್‌ಸಿಂಗ್ ರಸ್ತೆ ಸೇರಿದಂತೆ 25 ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ತಡೆ ಹಾಕಲಾಗಿದ್ದು, ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೆಹಲಿಯಲ್ಲಿ ಅಘೋಷಿತ್ ಬಂದ್ ವಾತಾವರಣ ಕಂಡು ಬಂದಿದೆ.
ನವದೆಹಲಿಯ ರಾಜ್‌ಘಾಟ್ ಸಮೀಪದ ರಾಷ್ಟ್ರೀಯ ಸ್ಮತಿ ಸ್ಥಳದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಟಲ್‌ರ ಅಂತ್ಯಸಂಸ್ಕಾರ ನಡೆಯಲಿದೆ.
ಕುಟುಂಬ ಸದಸ್ಯರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ನೆಚ್ಚಿನ ನಾಯಕನಿಗೆ ಗೌರವ ಸಲ್ಲಿಸುತ್ತಿದ್ದಾರೆ.