ಚನ್ನರಾಯಪಟ್ಟಣ: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಉಪ ಚುನಾವಣೆ ವಿಷಯವಾಗಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿಯಲ್ಲಿ ಬಿಜೆಪಿ ಮುಖಂಡರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಸಂಬಂಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ, ಜೆಡಿಎಸ್ ನಾಯಕ ಡಾ|ಸೂರಜ್ ರೇವಣ್ಣ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.
ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ರಾಮ್ ನಿವಾಸ್ ಸೆಪೆಟ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂಬಿಹಳ್ಳಿಯಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ತುಕಡಿ ನಿಯೋಜಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕೆ.ಆರ್. ಪೇಟೆ ಉಪಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಬುಧವಾರ ಬೆಂಗಳೂರಿನ ವಿಜಯನಗರದ ಬಿಬಿಎಂಪಿ ಮಾಜಿ ಸದಸ್ಯ ರವೀಂದ್ರ ಎಂಬುವವರು ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿಯ ಸ್ನೇಹಿತನ ಮನೆಗೆ ಸಹಪಾಠಿಗಳೊಂದಿಗೆ ಬಂದಿದ್ದರು. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಡಾ.ಸೂರಜ್‌ಗೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ ಎನ್ನಲಾಗಿದೆ.
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ರವೀಂದ್ರ ಹಣ ಹಂಚಲು ಬಂದಿದ್ದಾರೆಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಕೆಲವು ಕಾರ್ಯಕರ್ತರು ಮತ್ತು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ ರವೀಂದ್ರ, ಆನಂದ, ಸಂತೋಷ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ರವೀಂದ್ರ ಅವರ ಸಹಪಾಠಿಯಾಗಿರುವ ಆನಂದ್ ಮತ್ತು ಸಂತೋಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.