ರಾಯಚೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಗಬೇಕಾದರೆ ಪ್ರತಿ ಸೋಮವಾರ ಅಥವಾ ಶುಕ್ರವಾರ ಅಂಗಡಿಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ತಿಳಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲು
ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಂದು ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಈ ಹಿಂದೆ ಬಾಲಕಾರ್ಮಿಕ ತರಬೇತಿ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡಿ 2018-19ನೇ ಸಾಲಿನಲ್ಲಿ ಎಸ್ಸೆಲ್ಸಿಸಿ, ಪಿಯುಸಿ, ಪದವಿ ಹಾಗೂ ಐ.ಟಿ.ಐ, ಡಿಪ್ಲೋಮಾ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು.
ಸಮಾರಂಭಕ್ಕೆ ಬರುವ ಮಕ್ಕಳಿಗೆ ಕೆಎಂಎಫ್‌ನಿಂದ ಹಾಲು ಹಾಗೂ ಮಜ್ಜಿಗೆ ವಿತರಣೆ ಹಾಗೂ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಆರೋಗ್ಯ ಇಲಾಖೆಯಿಂದ ಒಬ್ಬ ವೈದ್ಯಾಧಿಕಾರಿಗಳೊಡನೆ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಲಕ್ಷ್ಮೀಬಾಯಿಗೆ ಸೂಚಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ, ಡಿಡಿಪಿಐ ಬಿ.ಕೆ.ನಂದನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ, ಕೈಗಾರಿಕಾ ಇಲಾಖೆ ಉಪನಿರ್ದೇಶಕ ಬಸವರಾಜ ಯಂಕಂಚಿ, ನಗರದ ಪೂರ್ವ ವೃತ್ತದ ಸಿಪಿಐ ಆರ್.ಎಂ.ನದಾಫ, ಕಾರ್ಮಿಕ ಪ್ರಭಾರ ನಿರೀಕ್ಷಕ ಬಸಪ್ಪ ಇತರರಿದ್ದರು.