ಸಿಡ್ನಿ: ಮಾರಣಾಂತಿಕ ಕೋವಿಡ್ 19 ವೈರಸ್ ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹೆಚ್ಚು ಮುಖ್ಯವಾಗಿದೆ. ಆದರೆ ಸಾರ್ವಜನಿಕ ವಲಯದಲ್ಲಿ ನಿರ್ಲಕ್ಷ್ಯದಿಂದಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವಿಫಲರಾಗುತ್ತಿದ್ದು, ಆಸ್ಟ್ರೇಲಿಯಾ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.
ಕೋವಿಡ್ 19 ಮಹಾಮಾರಿ ಸಮುದಾಯವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಸರ್ಕಾರ ಮನೆ ಬಿಟ್ಟು ಹೊರ ಬಂದಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಆಸ್ಟ್ರೇಲಿಯಾದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದೆ. ನ್ಯೂ ಸೌತ್ ವೇಲ್ಸ್ ನ ವೃದ್ಧಾಶ್ರಮದಲ್ಲಿ ಹಿರಿಯ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಲವಾರು ನಿವಾಸಿಗಳು, ಉದ್ಯೋಗಿಗಳಿಗೆ ಕೋವಿಡ್ 19 ಸೋಂಕು ಇದ್ದಿರುವುದು ದೃಢಪಟ್ಟಿದೆ ಎಂದು ನ್ಯೂ ಸೌತ್ ವೇಲ್ಸ್ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ 19 ಪೀಡಿತರ ಸಂಖ್ಯೆ 3,378ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇತರ ದೇಶಗಳಿಗೆ ಹೋಲಿಸಿದರೆ ಆಸ್ಟ್ರೇಲಿಯಾದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದೆ. ಆಸ್ಟ್ರೇಲಿಯಾದಲ್ಲಿ ನ್ಯೂ ಸೌತ್ ವೇಲ್ಸ್ ಹಾಗೂ ವಿಕ್ಟೋರಿಯಾ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ ಎಂದು ವರದಿ ತಿಳಿಸಿದೆ.
ವಿದೇಶದಿಂದ ಆಸ್ಟ್ರೇಲಿಯಾಕ್ಕೆ ಆಗಮಿಸಿದ ಎಲ್ಲಾ ಪ್ರಜೆಗಳನ್ನು ಹೋಟೆಲುಗಳಲ್ಲಿ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಇವರ ಎಲ್ಲಾ ಖರ್ಚು ವೆಚ್ಚ ಆಸ್ಟ್ರೇಲಿಯಾ ಸರ್ಕಾರ ವಹಿಸಿಕೊಳ್ಳಲಿದೆ ಎಂದು ಹೇಳಿದೆ. ಪ್ರಯಾಣಿಕರಿಗೆ ಸೇನೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ವಿವರಿಸಿದೆ.