Advertisement

ನೀರಿನ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ

02:48 PM Jun 02, 2019 | Team Udayavani |

ಮೂಡಲಗಿ: ತಾಲೂಕಿನಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ತಲೆದೋರದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಇಲ್ಲಿಯ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ ಶನಿವಾರ ನಡೆದ ಮೂಡಲಗಿ ತಾಲೂಕಾ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಯಾವ ಸಮಸ್ಯೆಗಳು ಉದ್ಭವವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಪಂ ಮಟ್ಟದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ನೀಗಿಸಲು ಪಿಡಿಒಗಳು ಸ್ಥಳದಲ್ಲಿ ಬೀಡುಬಿಟ್ಟು ಕರ್ತವ್ಯ ನಿರ್ವಹಿಸಬೇಕು. ಒಂದು ವೇಳೆ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ತಾಲೂಕಿನ ತಿಗಡಿ ಗ್ರಾಮದಲ್ಲಿ ರೇಷ್ಮೆ ಇಲಾಖೆ ಕಟ್ಟಡದಲ್ಲಿ ಮೇವು ಬ್ಯಾಂಕ್‌ನ್ನು ತೆರೆದಿದ್ದು, ಮೇವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಈಗ ಮೇವಿನ ಸಮಸ್ಯೆ ರೈತರಿಗಿಲ್ಲ. ಬೆಳಗಾವಿಯಿಂದ ಮೂಡಲಗಿಗೆ ಸ್ಥಳಾಂತರಗೊಂಡಿರುವ ಪಶು ವೈದ್ಯಕೀಯ ಪಾಲಿಕ್ಲಿನಿಕ್‌ ಆರಂಭಕ್ಕೆ ಮೂಡಲಗಿಯಲ್ಲಿ ಕಟ್ಟಡ ಲಭ್ಯವಿದೆ. ಆದರೆ ಸಿಬ್ಬಂದಿ ಕೊರತೆ ಇರುವದರಿಂದ, ಶೀಘ್ರದಲ್ಲಿಯೇ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ಮೂಡಲಗಿಯಲ್ಲಿ ಪಶು ವೈದ್ಯಕೀಯ ಪಾಲಿ ಕ್ಲಿನಿಕ್‌ ಆರಂಭಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.

ರೋಗಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ದೊರಕಿಸಿಕೊಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸ ಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ವಿತರಿಸಬೇಕು. ಅಲ್ಲದೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಬೇಕು. ವಿನಂತಿ ಮೇರೆಗೆ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಸೂಚಿಸಿದರು.

ಮೂಡಲಗಿ ಪಟ್ಟಣದಲ್ಲಿ ಉಪನೋಂದಣಾಕಾರಿ ಕಚೇರಿ ಆರಂಭಕ್ಕೆ ಈಗಾಗಲೇ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಮೂಡಲಗಿಯಲ್ಲಿ ಉಪನೋಂದಣಾಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದರು. ಈ ವೇಳೆ ತಹಶೀಲ್ದಾರ್‌ ಮುರಳೀಧರ ತಳ್ಳಿಕೇರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ಡಿವೈಎಸ್‌ಪಿ ಪ್ರಭು ಸೇರಿದಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next