Advertisement

ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ : ಪ್ರಧಾನ್ ಭೇಟಿಯಾದ ಸಚಿವ ಸುನೀಲ್

04:12 PM Apr 06, 2022 | Team Udayavani |

ನವದೆಹಲಿ: ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಬುಧವಾರ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

Advertisement

ವಿಶೇಷವಾಗಿ ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಬಗ್ಗೆ ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಯಿತು. ಸ್ವಾಯತ್ತತೆ ನೀಡಿದರೆ ಮಾತ್ರ ಅದು ರಚನಾತ್ಮಕ ಕಾರ್ಯಚಟುವಟಿಕೆ ಹಮ್ಮಿಕೊಳ್ಳಲು ಸಾಧ್ಯ ಎಂಬ ಸಂಗತಿಯನ್ನು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿಕೊಡಲಾಯಿತು. ಕೇಂದ್ರ ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಾಯತ್ತತೆ ನೀಡುವ ಬಗ್ಗೆ ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ಶಾಸ್ತ್ರೀಯ ಭಾಷೆಗೆ ಸಂಬಂಧಪಟ್ಟಂತೆ ದೊಡ್ಡಮಟ್ಟದಲ್ಲಿ ಕಾರ್ಯಚಟುವಟಿಕೆಗಳನ್ನು ರೂಪಿಸಲು ಅಗತ್ಯ ಅನುದಾನವನ್ನು ಒದಗಿಸುವ ಕುರಿತು ಚರ್ಚಿಸಲಾಯಿತು. ಇದಕ್ಕೂ ಸಹ ಸ್ಪಂದಿಸಿದ ಕೇಂದ್ರ ಸಚಿವರು ಅನುದಾನ ಹೆಚ್ಚಳ ಮಾಡುವ ಬಗ್ಗೆ ಸಂಬಂಧಪಟ್ಟವರೊಂದಿಗೆ, ಚರ್ಚಿಸುವುದಾಗಿ ತಿಳಿಸಿದರು ಎಂದು ಹೇಳಿದ್ದಾರೆ.

ಬಹಳ ಮುಖ್ಯವಾಗಿ ಸ್ವತಃ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶೀಘ್ರ ದಲ್ಲಿಯೇ ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷಾ ಸಂಸ್ಥಾನ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next