ಶಿವಮೊಗ್ಗ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅತ್ಯುನ್ನತ ಸಾಧನೆಗೈದ 10 ಜನ ಪ್ರತಿಭಾವಂತ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರನ್ನು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಏಪ್ರಿಲ್ 21ರಂದು ನಡೆಯಲಿರುವ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು, ಪ್ರಶಸ್ತಿಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಆರ್.ಸೆಲ್ವಮಣಿ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೌಕರರ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಜಿಲ್ಲಾ ಸರ್ವೋತ್ತಮ ಸೇವಾ ಪುರಸ್ಕಾರಕ್ಕೆ ಭಾಜನರಾಗಿದ್ದ ಅಧಿಕಾರಿ, ನೌಕರರನ್ನು ಸಹ ಇದೇ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ವೇದಿಕೆಯಲ್ಲಿ ಕಳೆದ ಹಾಗೂ ಈ ಸಾಲಿನ ಒಟ್ಟೂ 20 ಜನ ನೌಕರರನ್ನು ಗೌರವಿಸಲಾಗುತ್ತಿದೆ ಎಂದರು.
ಪ್ರಶಸ್ತಿಗೆ ಎ, ಬಿ, ಸಿ, ಡಿ ವೃಂದದ ಕಾಯಂ ಸರ್ಕಾರಿ ನೌಕರರ ಉತ್ತಮ ಸೇವೆ ಪರಿಗಣಿಸಲಾಗುವುದು. ಅಲ್ಲದೆ, ನಾಗರಿಕರಿಗೆ ಗುಣಮಟ್ಟದ ಸೇವೆ ನೀಡಿರುವುದು, ನಾಗರಿಕ ಸ್ನೇಹಿ, ಭ್ರಷ್ಟಾಚಾರ ರಹಿತ ವಾತಾವರಣ ನಿರ್ಮಾಣ, ಮುಂದಾಳತ್ವ, ಚಲನಶೀಲಗಳ ರಚನೆ, ನಾಗರಿಕರ ಅನುಕೂಲಕ್ಕಾಗಿ ವಿನೂತನ ಪದ್ಧತಿ ಅಳವಡಿಕೆ, ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆ, ಕಚೇರಿ ವ್ಯವಸ್ಥೆ, ಇಲಾಖೆ ಕಾರ್ಯನಿರ್ವಹಣೆಯಲ್ಲಿ ಸುಧಾರಣೆ ಮತ್ತಿತರ ಪ್ರಮುಖ ಅಂಶಗಳನ್ನು ಪರಿಗಣಿಸಲಾಗುತ್ತದೆ ಎಂದರು.
ಸರ್ಕಾರದ ಮಾರ್ಗಸೂಚಿಯಂತೆ ಒಳಾಡಳಿತ ಇಲಾಖೆ, ಅರಣ್ಯ, ಪರಿಸರ, ಜೀವಶಾಸ್ತ್ರ ಇಲಾಖೆಯ ಸಮವಸ್ತ್ರ ಅಧಿಕಾರಿ ಸಿಬ್ಬಂದಿ, ಶಿಕ್ಷಣ ಇಲಾಖೆಯ ಬೋಧಕ ಸಿಬ್ಬಂದಿ ಹೊರತುಪಡಿಸಿ ಉಳಿದ ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಈ ಯೋಜನೆಯು ಭಾರತೀಯ ಸೇವಾ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ಎಲ್ಲ ಅಂಶಗಳನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಏಪ್ರಿಲ್ 21 ರಂದು ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನೌಕರರ ಸಂಘದ ಪದಾ ಧಿಕಾರಿಗಳು ಪಾಲ್ಗೊಳ್ಳುವರು. ಈ ಕಾರ್ಯಕ್ರಮದಲ್ಲಿ ಜನಸ್ನೇಹಿ ಆಡಳಿತದಲ್ಲಿ ನೌಕರರ ಪಾತ್ರ ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ತಮ್ಮ ಕಾರ್ಯಕ್ಷೇತ್ರದಲ್ಲಿ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ, ಹಗಲಿರುಳು ಕಚೇರಿಯಲ್ಲಿದ್ದು, ಕರ್ತವ್ಯ ನಿಷ್ಠೆ ಮೆರೆದ ನೌಕರರನ್ನು ಗುರುತಿಸಿ, ಗೌರವಿಸಿದಾಗ ನೌಕರರ ಶ್ರಮ ಸಾರ್ಥಕವಾಗುತ್ತದೆ. ಕಾರ್ಯನಿರ್ವಹಿಸುವ ಹುದ್ದೆಗೆ ದೊಡ್ಡದು ಅಥವಾ ಸಣ್ಣದು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಬದಲಾಗಿ ಕರ್ತವ್ಯದಲ್ಲಿ ದಕ್ಷತೆ, ಮತ್ತು ಕಾರ್ಯ ನಿರ್ವಹಿಸುವ ರೀತಿಯನ್ನು ಪರಿಗಣಿಸಲಾಗುತ್ತದೆ. ದಕ್ಷ ನೌಕರರನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ನೌಕರರಿಗೆ ಮತ್ತಷ್ಟು ಪ್ರೇರಣೆ ನೀಡಲಿವೆ ಎಂದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಜಿಲ್ಲೆಯ ವಿವಿಧ ಇಲಾಖಾ ಅಧಿಕಾರಿ-ಸಿಬ್ಬಂದಿಗೆ ಒಒಡಿ ಸೌಲಭ್ಯ ನೀಡುವುದಾಗಿ ಜಿಲ್ಲಾಕಾರಿಗಳು ಆದೇಶಿಸಿದ್ದಾರೆ ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ|ನಾಗೇಂದ್ರ ಎಫ್. ಹೊನ್ನಳ್ಳಿ, ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.