Advertisement

ಜಾಗೃತಿಯಿಂದ ಕ್ಷಯ ರೋಗ ನಿಯಂತ್ರಣ ಸಾಧ್ಯ: ಜಿ.ಪಂ. ಸಿಇಒ

09:28 PM Mar 25, 2019 | sudhir |

ಉಡುಪಿ: ಕ್ಷಯ ರೋಗದ ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಕ್ಷಯ ರೋಗವನ್ನು ನಿಯಂತ್ರಿಸಬಹುದು ಎಂದು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ತಿಳಿಸಿದರು.

Advertisement

ಅವರು ಸೋಮವಾರ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಸರ್ವೇಕ್ಷಣಾ ಘಟಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿದ್ಯಾರತ್ನ ಕಾಲೇಜ್‌ ಆಫ್ ನರ್ಸಿಂಗ್‌ ಆಶ್ರಯದಲ್ಲಿ ಅಂಬಲಪಾಡಿಯ ಪ್ರಗತಿ ಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷಯ ರೋಗ ನಿಯಂತ್ರಣಕ್ಕಾಗಿ ಹಲವಾರು ಕಾರ್ಯಾಗಾರವನ್ನು ನಡೆಸಿದರೂ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಹೆಚ್ಚು ಜಾಗೃತಿ ಮೂಡಿಸುವ ಮೂಲಕ 2020-25ಕ್ಕೆ ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಧ್ಯೇಯವನ್ನು ಹೊಂದಿದೆ ಎಂದರು. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಮತದಾರರಿಗೆ ಕರೆ ನೀಡಿದರು.

ಗ್ರಾಮಾಭಿವೃದ್ಧಿ ತರಬೇತಿ ಕೇಂದ್ರದ ನಿರ್ದೇಶಕ ಪುರುಶೋತ್ತಮ್‌
ಮಾತನಾಡಿ, 25-30 ವರ್ಷಗಳ ಹಿಂದೆ ದೇಶದಲ್ಲಿ ಕ್ಷಯ ರೋಗ ವ್ಯಾಪಕವಾಗಿ ಹಬ್ಬಿತ್ತು. ಇತ್ತೀಚಿನ ದಿನಗಳಲ್ಲಿ ಕ್ಷಯ ರೋಗದ ನಿರ್ಮೂಲನೆಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕ್ಷಯ ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ವಿವಿಧ ಸಂಘ ಸಂಸ್ಥೆಗಳು ಸೇರಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಉಡುಪಿ ವೃತ್ತದ ಸಹಾಯಕ ಔಷಧ ನಿಯಂತ್ರಣಾಧಿಕಾರಿ ನಾಗರಾಜ್‌ ಕೆ.ವಿ ಮಾತನಾಡಿ, ಕ್ಷಯ ರೋಗ ನಿಯಂತ್ರಣಕ್ಕೆ ಮಾದರಿ ಕಾರ್ಯಕ್ರಮಗಳು ನಡೆಯುತ್ತಿದೆ ಎಂದರು.

Advertisement

ಉಡುಪಿಯ ವಿದ್ಯಾರತ್ನ ಕಾಲೇಜ್‌ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳಿಂದ ಕ್ಷಯ ರೋಗದ ಜಾಗೃತಿ ಕುರಿತು ಕಿರು ನಾಟಕ ಪ್ರದರ್ಶನ ನಡೆಯಿತು. ಐಎಂಎ ಉಡುಪಿ ಅಧ್ಯಕ್ಷ ಡಾ| ಗುರುಮೂರ್ತಿ, ವಿದ್ಯಾರತ್ನ ಕಾಲೇಜ್‌ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಡಾ| ಅನಿತಾ ಸಿ ರಾವ್‌, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್‌ ಡಾ| ಮಧುಸೂದನ ನಾಯಕ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್‌ ಉಪಾಧ್ಯಾಯ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು ಎಸ್‌.ವಿ. ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಓಂ ಪ್ರಕಾಶ್‌ ಕಟ್ಟಿಮನಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ನಾಗರತ್ನ ಸ್ವಾಗತಿಸಿದರು. ಆಲಂದೂರು ಮಂಜುನಾಥ್‌ ನಿರೂಪಿಸಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next