Advertisement

ಕ್ಯಾನ್ಸರ್‌ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

05:45 PM Feb 05, 2022 | Team Udayavani |

ಗದಗ: ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕ್ಯಾನ್ಸರ್‌ ಕಾಯಿಲೆಯ ತೀವ್ರತೆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ.ಸಲಗರೆ ಹೇಳಿದರು.

Advertisement

ನಗರದ ಗಂಗಿಮಡಿ ಕಾಲೋನಿಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಜರುಗಿದ ವಿಶ್ವ ಕ್ಯಾನ್ಸರ್‌ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನ ಶೈಲಿಯ ಒತ್ತಡದಿಂದಾಗಿ ಅನೇಕ ಜನರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಅದರಲ್ಲೂ ತಮ್ಮ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಸಲುವಾಗಿ ತಂಬಾಕು ವ್ಯಸನಿಗಳಾಗುತ್ತಿದ್ದಾರೆ. ಇದರಿಂದಾಗಿ ತಮಗೆ ಅರಿವಿಲ್ಲದೇ ಮಾರಣಾಂತಿಕ ಕ್ಯಾನ್ಸರ್‌ ಕಾಯಿಲೆಗೆ ತುತ್ತಾಗುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಕ್ಯಾನ್ಸರ್‌ ಕಾಯಿಲೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿದಲ್ಲಿ ಅಪಾಯದಿಂದ ಪಾರು ಮಾಡಬಹುದಾಗಿದೆ. ಪ್ರಸ್ತುತ ಜೀವನ ಶೈಲಿ, ಆಹಾರ ಪದ್ಧತಿ, ಕಲಬೆರಿಕೆ, ರಾಸಾಯನಿಕಯುಕ್ತ ಆಹಾರ ಗಳಿಂದಲೂ ಕಾನ್ಸರ್‌ ಕಾಯಿಲೆಗೆ ಬಲಿಯಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯವಾಗಬೇಕಾಗಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ|ಜಗದೀಶ ನುಚ್ಚಿನ ಮಾತನಾಡಿ, ಬಹಳಷ್ಟು ಜನರಿಗೆ ಕ್ಯಾನ್ಸರ್‌ ಬಗ್ಗೆ ಅರಿವು ಇಲ್ಲದಿರುವುದರಿಂದ ಆರಂಭಿಕ ಹಂತದಲ್ಲಿ ಪತ್ತೆಯಾಗದೇ ಸಾವು ನೋವುಗಳು ಸಂಭವಿಸುತ್ತಿವೆ. ಕ್ಯಾನ್ಸರ್‌ ಒಂದು ಅಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವುದಿಲ್ಲ.

Advertisement

ಅಸಾಂಕ್ರಾಮಿಕ ಕಾಯಿಲೆಗಳಲ್ಲಿ ಮೊದಲನೆಯದಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಹೆಚ್ಚಿನ ಜನ ಮರಣ ಹೊಂದುತ್ತಿದ್ದು, ನಂತರ ಎರಡನೆಯದಾಗಿ ಕ್ಯಾನ್ಸರ್‌ನಿಂದಾಗಿ ಜನರು ಸಾವನ್ನಪ್ಪುತ್ತಿದ್ದಾರೆ. ಕ್ಯಾನ್ಸರ್‌ ಪ್ರಕರಣಗಳಲ್ಲಿ ಸುಮಾರು ಶೇ.34 ಸಾಮಾನ್ಯ ಕ್ಯಾನ್ಸರ್‌ ರೋಗಿಗಳಾಗಿದ್ದಾರೆ. ಬಾಯಿ, ಸ್ಥನ ಹಾಗೂ ಗರ್ಭ ಕಂಠದ ಕ್ಯಾನ್ಸರ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಡುವ ಸ್ಥನ ಕ್ಯಾನ್ಸರ್‌, ಗರ್ಭ ಕಂಠದ ಕ್ಯಾನ್ಸರ್‌ ಹಾಗೂ ಇತರ ಕ್ಯಾನ್ಸರ್‌ಗಳ ಲಕ್ಷಣಗಳ ಕುರಿತು ಹಾಗೂ ಅವುಗಳನ್ನು ಸ್ವಯಂ ಪರೀಕ್ಷೆಗೆ ಒಳಗಾಗಿ, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವೇದಿಕೆ ಮೇಲೆ ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ರಾಜೇಂದ್ರ ಬಸರಿಗಿಡದ, ತಾಲೂಕು ಆರೋಗ್ಯಾ ಧಿಕಾರಿ ಡಾ. ಪ್ರೀತ್‌ ಖೊನಾ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ.ರವಿ ಕಡಗಾವಿ, ಗಂಗಿಮಡಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಆರ್‌.ಬಿ.ಸಂಕಣ್ಣವರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next