ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿರುವ ನೀರು ಹಾಗೂ ಆಹಾರ ಸೇವಿಸುವುದರಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಜನ ಜಾಗೃತಿ ಮೂಡಿಸಬೇಕಿದೆ ಎಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಮಿನಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಫ್ಲೋರೋಸಿಸ್ ತಡೆಗಟ್ಟುವ ಘಟಕದ ವತಿಯಿಂದ ಜಿಲ್ಲೆಯ ಫ್ಲೋರೋಸಿಸ್ ತಡೆಗಟ್ಟುವ ಹಾಗೂ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಫ್ಲೋರೋಸಿಸ್ ತೀವ್ರತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟ ಅಂತರ ಇಲಾಖೆ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾಗೃತಿ ಮೂಡಿಸಿ: ಎಂಟು ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಈ ಫ್ಲೋರೋಸಿಸ್ ಅಂಶದ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಬೇಕು. ಫ್ಲೋರೈಡ್ ಅಂಶ ಹೆಚ್ಚಾಗಿರುವ ನೀರು ಹಾಗೂ ಆಹಾರ ಸೇವಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ರೋಗವನ್ನು ಸಂಪೂರ್ಣ ನಿಯಂತ್ರಣಕ್ಕೆ ತರಬೇಕೆಂದರು.
ಜಿಲ್ಲೆಯಲ್ಲಿನ ಪ್ರತಿ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಫ್ಲೋರೈಡ್ ಮುಕ್ತ ನೀರು ಒದಗಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಫ್ಲೋರೋಸಿಸ್ ಬಗ್ಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡುವುದು. ಫ್ಲೋರೋಸಿಸ್ ರೋಗ ಸಂಬಂಧ ತಪಾಸಣೆ ಕೇಂದ್ರವನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಆರಂಭಿಸಲಾಗಿದ್ದು, ಈ ಬಗ್ಗೆಯೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.
ಜುಲೈ ತಿಂಗಳಲ್ಲಿ 28 ರಂದು ಅಮಲ ದಿನವನ್ನು ಜಿಲ್ಲಾದ್ಯಂತ ಆಚರಿಸಿ ಫ್ಲೋರೋಸಿಸ್ ದುಷ್ಪರಿಣಾಮಗಳ ಬಗ್ಗೆ ಜನ ಸಾಮಾನ್ಯರಲ್ಲಿ ವಿಶೇಷವಾಗಿ ಪ್ಲೋರೈಡ್ ಅಧಿಕ ಪ್ರಮಾಣದಲ್ಲಿರುವ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ, ಗೌರಿಬಿದನೂರು ತಾಲೂಕಿನ ಜನರಲ್ಲಿ ಮಾಹಿತಿ ನೀಡಿ ಅರಿವು ಮಾಡಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಿಇಒ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸಂತಾನ ಹಾಗೂ ಮಕ್ಕಳ ಆರೋಗ್ಯಾಧಿಕಾರಿ ಡಾ.ಚನ್ನಕೇಶವರೆಡ್ಡಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.