ಬೀದರ: ಬಾಲ ಕಾರ್ಮಿಕ ಪದ್ಧತಿಯನ್ನು ಹೊಗಲಾಡಿಸಲು ಜನರಲ್ಲಿ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚೇಗರಡ್ಡಿ ಹೇಳಿದರು.
ನಗರದ ರಂಗ ಮಂದಿರದಲ್ಲಿ ರವಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ಅಳಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಿ, ಶಿಕ್ಷಣವಂತರನ್ನಾಗಿ ಮಾಡುವುದರ ಕುರಿತು ಎಲ್ಲ ಪಾಲಕರು ತಿಳಿದುಕೊಳ್ಳಬೇಕು. ದುಡಿಮೆ ಬೇಡ, ಶಿಕ್ಷಣ ಬೇಕು ಎಂಬ ವಾಕ್ಯದ ಕುರಿತು ಎಲ್ಲರೂ ಅರಿಯಬೇಕು. ಬಾಲ ಕಾರ್ಮಿಕರನ್ನು ಕೆಲಸಕ್ಕೆ ಹಚ್ಚುವದು ಮತ್ತು ದುಡಿಸಿಕೊಳ್ಳುವುದು ಅಪರಾಧವಾಗಿದ್ದು, 50 ಸಾವಿರದವರೆಗೆ ದಂಡ 20 ಸಾವಿರದವರೆಗೆ ಪರಿಹಾರ, 2 ವರ್ಷದವರೆಗೆ ಜೈಲು ಶಿಕ್ಷೆ ಕಡ್ಡಾಯವಾಗಿದ್ದು, ಉದ್ಯಮಿದಾರರು ಬಾಲಕಾರ್ಮಿಕರನ್ನು ತಮ್ಮ ಕೆಲಸದ ಸ್ಥಳಗಳಲ್ಲಿ ನಿಯೋಜನೆ ಮಾಡದೆ ಕಾನೂನಿನ ಅರಿವಿನ ಕುರಿತು ತಿಳಿದುಕೊಳ್ಳುವುದು ಮುಖ್ಯ ಎಂದರು.
ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳನ್ನು ದುಡಿಮೆಗೆ ಕಳುಹಿಸಿದೆ, ಶಿಕ್ಷಣದ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಮತ್ತು ಅವರನ್ನು ಶಿಕ್ಷಣ ನೀಡಿ ಸಮಾಜದಲ್ಲಿ ತಮ್ಮ ಮಕ್ಕಳು ಮುಂದೆ ಬರುವಂತೆ ಮಾಡಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಬ್ದುಲ್ ಖಾದರ ಅವರು ಮಕ್ಕಳಿಗೆ ಬಾಲಕಾರ್ಮಿಕ ಪದ್ಧತಿಯ ಪ್ರತಿಜ್ಞೆಯನ್ನು ಬೋಧಿಸಿದರು. ಬಾಲನ್ಯಾಯ ಮಂಡಳಿ ಸದಸ್ಯ ಶಶಿಧರ ಕೊಸಂಬೆ, ಬಿ.ಎಸ್.ಪಾಟೀಲ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಮೃತರಾವ ಚೀಮಕೊಡೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಂಭುಲಿಂಗ ಹಿರೇಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಮಕ್ಕಳು ಭಾಗವಹಿಸಿದ್ದರು. ಜಿಲ್ಲಾ ಬಾಲಕಾರ್ಮಿಕ ಯೋಜನೆ ಅಧಿಕಾರಿ ಹರಿ ದೇಶಪಾಂಡೆ ಪ್ರಾಸ್ತಾವಿಕ ನುಡಿದರು. ಯೋಜನಾ ನಿರ್ದೇಶಕ ಅರ್ಜುನ ಎಸ್. ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ವಿವಿಧ ಶಾಲಾ ಮಕ್ಕಳಿಂದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತದಿಂದ ರಂಗಮಂದಿರದವರೆಗೆ ಬಾಲಕಾರ್ಮಿಕ ಪದ್ಧತಿ ತೊಲಗಿಸೋಣ ಎಂಬ ಘೋಷಣೆಯೊಂದಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.