Advertisement

ಬಾಲ ಕಾರ್ಮಿಕ ಪದ್ಧತಿ ತಡೆಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

05:01 PM Jun 14, 2022 | Team Udayavani |

ಹಾವೇರಿ: ಬಾಲ ಕಾರ್ಮಿಕತೆ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿ ತಡೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ನಗರದ ಮುನ್ಸಿಪಲ್‌ ಹೈಸ್ಕೂಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಬಡತನ, ಅನಕ್ಷರತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದ್ದಾರೆ. ಮಕ್ಕಳ ಓದು ಹಾಗೂ ಆಟೋಟಕ್ಕೆ ಮುಕ್ತ ವಾತಾವರಣ ಬೇಕು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡುವಲ್ಲಿ ತಂದೆ, ತಾಯಿಯರ ಪಾತ್ರ ಮುಖ್ಯವಾಗಿದೆ ಎಂದರು. ಮಕ್ಕಳ ರಕ್ಷಣೆ ಕೇವಲ ತಂದೆ-ತಾಯಿ ಯರ ಜವಾಬ್ದಾರಿಯಲ್ಲ. ಸರ್ಕಾರ ಸಹ ಮಕ್ಕಳ ರಕ್ಷಣೆಗೆ ಸದಾ ಸಿದ್ಧವಿದೆ. 14 ವರ್ಷದ ಮಕ್ಕಳಿಗೆ ಕಡ್ಡಾಯ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಕೋವಿಡ್‌ನ‌ಲ್ಲಿ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಆರ್ಥಿಕವಾಗಿ ತೊಂದರೆಯಾಗದಂತೆ ಸರ್ಕಾರದಿಂದ ಪ್ರತಿ ತಿಂಗಳು ಧನ ಸಹಾಯ ಮಾಡಲಾಗುತ್ತಿದೆ. ಮಕ್ಕಳು ನಮ್ಮ ಸಂಸ್ಕೃತಿ, ಪರಂಪರೆ ಮುನ್ನಡೆಸಿ ಕೊಂಡು ಹೋಗುವ ಪ್ರಜೆಗಳಾಗಿದ್ದಾರೆ. ನಿಮ್ಮ ಸುತ್ತಮುತ್ತ ಬಾಲ ಕಾರ್ಮಿಕರು ಕಂಡುಬಂದಲ್ಲಿ ಉಚಿತ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.

ಪೊಲೀಸ್‌ ಇಲಾಖೆಯ ಎಂ.ಆರ್‌.ಜಾಲಗಾರ ಮಾತನಾಡಿ, 14 ವರ್ಷದ ಮಕ್ಕಳನ್ನು ಯಾವುದೇ ಕೆಲಸಕ್ಕೆ ಸೇರಿಸಿಕೊಳ್ಳುವಂತಿಲ್ಲ. 16ರಿಂದ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಮಕ್ಕಳಿಂದ ಅಪಾಯಕಾರಿ ಕೆಲಸ ಮಾಡಿಸುವುದು ಕಾನೂನು ಬಾಹೀರವಾಗಿದ್ದು, 20 ಸಾವಿರ ರೂ. ದಂಡ, 6 ತಿಂಗಳಿಂದ ಎರಡು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕರು ಕಂಡುಬಂದಲ್ಲಿ ಪೊಲೀಸ್‌ ಇಲಾಖೆ ಸಹಾಯವಾಣಿ ಸಂಖ್ಯೆ 112 ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಬಹುದು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್‌ ನ್ಯಾಯವಾದಿ ಪಿ.ಎಂ. ಬೆನ್ನೂರು ಅವರು ಬಾಲ್ಯಾವ್ಯವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ವಿಷಯ ಕುರಿತು ಉಪನ್ಯಾಸ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್‌. ಎಚ್‌.ಮಜೀದ್‌ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

Advertisement

ಕಾರ್ಯಕ್ರಮದಲ್ಲಿ ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಮಹಮ್ಮದ ರೋಷನ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಕಾರಿ ಜಯಶ್ರೀ ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ನೀರಲಗಿ, ಕಾರ್ಯದರ್ಶಿ ಈಶ್ವರ ನಂದಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರಮತ್ತೂರು, ಕಾರ್ಮಿಕ ನಿರೀಕ್ಷಕ ರಾದ ಲತಾ ಟಿ.ಎಸ್‌., ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಾಘವೇಂದ್ರ ಶಿರೂರು ಇದ್ದರು.

ಪಾಲಕರು ತಮ್ಮ ಬಡತನದ ಸಮಸ್ಯೆಗೆ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಿದಲ್ಲಿ ಆ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಕುಗ್ಗುತ್ತಾರೆ. ಸರ್ಕಾರದ ಸೌಲಭ್ಯಗಳನ್ನು ಪಡೆದು ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕು. ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿದಲ್ಲಿ ಮಕ್ಕಳು ಬಾಲ ಕಾರ್ಮಿಕರಾಗುವುದನ್ನು ತಡೆಯಬಹುದು. –ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next