Advertisement

ಕೇಂದ್ರ –ರಾಜ್ಯಕ್ಕೆ ಸಂತೋಷ್‌ ಬೆಸುಗೆ :  ಲಸಿಕೆ ವಿತರಣೆಗೆ ಆದ್ಯತೆ ನೀಡಲು ಸಲಹೆ

12:23 AM May 12, 2021 | Team Udayavani |

ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವ ರು ಸಿಎಂ ಯಡಿಯೂರಪ್ಪ ಮತ್ತು ಡಿಸಿಎಂ ಡಾ| ಅಶ್ವತ್ಥನಾರಾಯಣ ಅವರ ಜತೆಗೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.

Advertisement

ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಮತ್ತು ಕೊರೊನಾ ನಿಯಂತ್ರಣದಲ್ಲಿ ಕೇಂದ್ರ ಸರಕಾರವು ರಾಜ್ಯಕ್ಕೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಇಬ್ಬರು ನಾಯಕರ ಭೇಟಿ ಮಹತ್ವ ಪಡೆದಿದೆ.

ಸಿಎಂ ಭೇಟಿ ಸಂದರ್ಭದಲ್ಲಿ ಸಂತೋಷ್‌ ಅವರು ರಾಜ್ಯದಲ್ಲಿ ಕೊರೊನಾ ನಿಯಂತ್ರಣ ವಿಚಾರದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫ‌ಲಿತಾಂಶ, ಚಾಮರಾಜನಗರ ಆಮ್ಲಜನಕ ದುರಂತ ಮತ್ತು ಬೆಂಗಳೂರಿನ ಬೆಡ್‌ ಬ್ಲಾಕಿಂಗ್‌ ಬಗ್ಗೆ ಸ್ವಪಕ್ಷೀಯ ಸಂಸದರು ಮತ್ತು ಶಾಸಕರು ಬಹಿರಂಗ ಆರೋಪ ಮಾಡಿದ್ದರು.

ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಲ್ಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ವಿವರಣೆ ನೀಡಿ ಬಂದಿದ್ದಾರೆ. ಪ್ರಧಾನಿ ಮೋದಿ ಕೂಡ ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಬಿ.ಎಲ್‌. ಸಂತೋಷ್‌ ಭೇಟಿ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಇನ್ನಷ್ಟು ವೇಗವಾಗಿ ಕೆಲಸ ಮಾಡಬೇಕು. ಲಸಿಕೆ ವಿತರಣೆಗೆ ಆದ್ಯತೆ ನೀಡುವಂತೆ ಸಂತೋಷ್‌ ಅವರು ಸಿಎಂಗೆ ಸಲಹೆ ನೀಡಿದ್ದಾರೆ. ಲಸಿಕೆ ಹಾಕಿಸುವ ಕಾರ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರನ್ನು ಸಕ್ರಿಯವಾಗಿ ಬಳಸಿಕೊಳ್ಳಬೇಕು. ಕೊರೊನಾ ನಿಯಂತ್ರಣದಲ್ಲಿ ಎಲ್ಲರಿಗೂ ಜವಾಬ್ದಾರಿ ವಹಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಕ್ಕೆ ಅಗತ್ಯ ಇರುವ ಲಸಿಕೆಗಾಗಿ ಕೂಡಲೇ ಕೇಂದ್ರ ಸರಕಾರಕ್ಕೆ ಬೇಡಿಕೆ ಸಲ್ಲಿಸಿ, ರಾಜ್ಯದ ಶೇ. 50ರಷ್ಟು ಜನರಿಗಾದರೂ ಲಸಿಕೆ ಹಾಕಿಸುವ ಕಾರ್ಯ ಶೀಘ್ರ ತ್ವರಿತವಾಗಿ ಮಾಡುವಂತೆ ಸಿಎಂಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಡಿಸಿಎಂ ಜತೆ ಭೇಟಿ
ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಡಾ| ಸುಧಾಕರ್‌ ಅವರನ್ನು ಪಕ್ಷದ ಕಚೇರಿಗೆ ಕರೆಯಿಸಿಕೊಂಡ ಬಿ.ಎಲ್‌. ಸಂತೋಷ್‌, ಕೊರೊನಾ ನಿಯಂತ್ರಣದಲ್ಲಿ ಸರಕಾರ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬಿ.ಎಲ್‌. ಸಂತೋಷ್‌ ಭೇಟಿಯ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಾ| ಅಶ್ವತ್ಥನಾರಾಯಣ, ಪಕ್ಷದ ಹಿರಿಯ ನಾಯಕರು ಬಂದಾಗ ಭೇಟಿ ಮಾಡುವುದು ನಮ್ಮ ಕರ್ತವ್ಯ. ಕೊರೊನಾ ನಿಯಂತ್ರಣಕ್ಕಾಗಿ ಇನ್ನಷ್ಟು ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ರಾಜಕೀಯ ಚರ್ಚೆ ನಡೆಸಿಲ್ಲ. ಕೋವಿಡ್‌ ಸಂದರ್ಭದಲ್ಲಿ ಪಕ್ಷವು ಸರಕಾರದ ಬೆನ್ನಿಗೆ ನಿಂತು ಬೆಂಬಲ ನೀಡುತ್ತಿದೆ ಎಂದು ಹೇಳಿದರು. ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರೂ ಸಂತೋಷ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ನನ್ನನ್ನು ಭೇಟಿ ಮಾಡಿದ್ದರು. ರಾಜ್ಯದ ಕೋವಿಡ್‌ ಸ್ಥಿತಿಗತಿ ಕುರಿತು ಸಮಾಲೋಚನೆ ನಡೆಸಿದ್ದೇವೆ. ದಿಲ್ಲಿಯಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ.
– ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next