ದಾವಣಗೆರೆ: ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ವರ್ಚ್ಯುಯಲ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ದಾವಣಗೆರೆ, ಪಕ್ಕದ ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆಯುವ ರೈತರಿಗೆ ತಲಾ 5 ಸಾವಿರ ರೂ. ನೀಡಿರುವುದು ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ದಾವಣಗೆರೆಯಲ್ಲಿ ತಾಯಿ – ಮಗು ಆಸ್ಪತ್ರೆಯನ್ನು 22 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಭೂಮಿ ಪೂಜೆ ಮಾಡಿದ್ದೇವೆ. ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೊರೊನಾ ಟೆಸ್ಟ್ ಲ್ಯಾಬ್ ಆರಂಭಿಸಾಗಿದೆ. ಎರಡು ಖಾಸಗಿ ಆಸ್ಪತ್ರೆಗಳಲ್ಲೂ ಸಹ ಲ್ಯಾಬ್ ಆರಂಭಿಸಲಾಗಿದೆ ಎಂದವರು ಹೇಳಿದರು.