ಶಿವಮೊಗ್ಗ: ನಾನು ಭಾರತೀಯ ಪಕ್ಷದ ಕಾರ್ಯಕರ್ತ. ರಾಜ್ಯ ಉಪಾಧ್ಯಕ್ಷನಾಗಿ ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಯಾರಿಗೆ ಯಾವ ಸಂದರ್ಭದಲ್ಲಿ ಯಾರಿಗೆ ನೀಡಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ. ನಾನು ಯಾವುದೇ ಹುದ್ದೆಯ ನಿರೀಕ್ಷೆಯನ್ನಿಟ್ಟುಕೊಂಡು ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿ ಚುನಾವಣೆ ಎದುರಿಸಬೇಕು ಅಥವಾ ನಾನು ಚುನಾವಣೆಗೆ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬುದನ್ನು ಪಕ್ಷದ ಹಿರಿಯರು ನಿರ್ಧರಿಸಲಿದ್ದಾರೆ ಎಂದರು.
ಬಿಜೆಪಿ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ಶನಿವಾರ ಮತ್ತು ಭಾನುವಾರ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಹಾಗೂ ಮುಂಬರುವ ಚುನಾವಣೆಗಳನ್ನು ಎದುರಿಸುವ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ
ದೇವಸ್ಥಾನಗಳನ್ನು ಕೆಡವುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ದೇವಾಲಯ ಒಡೆಯಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿಯವರು ದೇವಾಲಯ ಒಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದರು.