Advertisement

ಪರೀಕ್ಷೆ ಸವಾಲಾಗಿ ಸ್ವೀಕರಿಸಿ

12:36 PM Jun 21, 2020 | Naveen |

ಭಾಲ್ಕಿ: ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿ ಉತ್ತಮ ರೀತಿಯಿಂದ ನಡೆಸಬೇಕು ಎಂದು ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ಸೂಚಿಸಿದರು.

Advertisement

ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಕರೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ವರ್ಷ ನಡೆಸುವುದಕ್ಕಿಂತಲೂ ಈ ವರ್ಷ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಜ್ಞಾನಮಟ್ಟ ಅಳೆಯುವುದರೊಂದಿಗೆ ಅವರ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕಿದೆ. ಹೀಗಾಗಿ ಕೋರ್ಟ್‌ ಆದೇಶದ ಪ್ರಕಾರ ಎಸ್‌ ಒಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಸೆಕ್ಷೆನ್‌ 144 ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪಾಲಕರು ಇತ್ತ ಸುಳಿಯಬಾರದು. ಪರೀಕ್ಷಾರ್ಥಿಗಳಿಗೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ದೂರವಾಣಿ ಮೂಲಕ ಮಾತನಾಡಿದ ಶಾಸಕ ಈಶ್ವರ ಖಂಡ್ರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಜೂ. 22ರಂದು ಬೆಳಗ್ಗೆ 9:00ಕ್ಕೆ ಮತ್ತೊಮ್ಮೆ ಸಭೆ ನಡೆಯಲಿದೆ. ಪ್ರತಿಯೊಬ್ಬರು ಖುದ್ದಾಗಿ ಹಾಜರಿರಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವಿರಯ್ಯ ರುದನೂರ ಮಾತನಾಡಿ, ತಾಲೂಕಿನಲ್ಲಿ ಒಟ್ಟು 15 ಪರೀಕ್ಷಾ ಕೇಂದ್ರಗಳಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಭೇಟಿ ನೀಡಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಜತೆಗೆ ಆರೋಗ್ಯ ಇಲಾಖೆ, ಪಂಚಾಯತ ರಾಜ್‌ ಇಲಾಖೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಕೈಜೋಡಿಸಿದ್ದಾರೆ. ಹೀಗಾಗಿ ಪರೀಕ್ಷೆಯಲ್ಲಿ ಯಾವ ಲೋಪವೂ ಎದುರಾಗದಂತೆ ಕಟ್ಟು ನಿಟ್ಟಾಗಿ ನಡೆಸಿ ತೋರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಜ್ಞಾನೇಶ್ವರ ನಿರಗುಡೆ ಮಾತನಾಡಿ, ಪರೀಕ್ಷಾರ್ಥಿಗಳಿಗೆ ಮತ್ತು ಪರೀಕ್ಷಾ ಸಿಬ್ಬಂದಿಗೆ ಸ್ಕ್ರಿನಿಂಗ್‌ ಮಾಡಿ ಪರೀಕ್ಷಾ ಕೇಂದ್ರದಲ್ಲಿ ಬಿಡಲಾಗುವುದು. ಸೊಂಕಿತ ಪರೀಕ್ಷಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

Advertisement

ತಾಪಂ ಇಒ ದೀಪಿಕಾ ನಾಯ್ಕರ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಕೇಂದ್ರಗಳಿಗೂ ಸ್ಯಾನಿಟೈಸರ್‌ ಸೇರಿದಂತೆ ಗ್ರಾಪಂ ವತಿಯಿಂದ ಸ್ವತ್ಛತೆ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವುದಾಗಿ ಹೇಳಿದರು. ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ, ಇಸಿಒ ಜಯರಾಮ ಬಿರಾದಾರ, ಹಣಮಂತ ಕಾರಾಮುಂಗೆ, ಇಸಿಒ ನಾಗಭೂಷಣ ಮಾಮಡಿ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ ಇದ್ದರು.

ಸಾಮಾಜಿ ಅಂತರ ಕಾಪಾಡಿಕೊಳ್ಳುವುದು ಮತ್ತು ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಮಗ್ರ ವ್ಯವಸ್ಥೆ ಮಾಡಿಕೊಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಕೊರತೆಯಾಗದಂತೆ ವೈಯಕ್ತಿಕವಾಗಿಯೂ ನಿಗಾ ವಹಿಸುತ್ತೇನೆ. ತಾಲೂಕಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾದರಿಯಾಗಿ ನಡೆಸಿ ತೋರಿಸಲಾಗುವುದು.
ಈಶ್ವರ ಖಂಡ್ರೆ,
ಶಾಸಕರು

Advertisement

Udayavani is now on Telegram. Click here to join our channel and stay updated with the latest news.

Next