ಹುಬ್ಬಳ್ಳಿ: ಗಬ್ಬೂರ ಬೈಪಾಸ್ ಅವ್ಯವಸ್ಥೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್ ಕಾರ್ಯದರ್ಶಿ ವಿಜಯಕುಮಾರ ಕುಂದನಹಳ್ಳಿ ನೇತೃತ್ವದಲ್ಲಿ ನಂದಿ ಹೈವೇ ಡೆವಲಪರ್ ಕಚೇರಿಗೆ ಮುತ್ತಿಗೆ ಹಾಕಿ, ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಗಬ್ಬೂರ ಬಳಿ ನಂದಿ ಹೈವೇ ಬೈಪಾಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಟೋಲ್ ಸಂಗ್ರಹಣೆ ಮಾಡಲಾಗುತ್ತಿದ್ದು,ಸರಿಯಾದ ಮೂಲಸೌಕರ್ಯ ಕಲ್ಪಿಸಿಲ್ಲ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಹಾಗೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಟೋಲ್‌ಗೇಟ್‌ನಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಇಲ್ಲ, ಶೌಚಾಲಯ ವ್ಯವಸ್ಥೆ ಇಲ್ಲ, ವಿದ್ಯುತ್ ದೀಪಗಳಿದ್ದರೂ ಬೆಳಗುವುದಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸರ್ವೀಸ್ ರಸ್ತೆಗಳು ಹಾಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಎಂದು ಎಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ
ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಕರೆದು ಚರ್ಚಿಸಿ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು. ಒಂದು ವಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳದೇ ಇದ್ದಲ್ಲಿ ಟೋಲ್ ಗೇಟ್ ಬಂದ್ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ಮೋಹನ ಅಸುಂಡಿ, ಯಮನೂರ ಜಾಧವ, ಪ್ರಭು ಪ್ರಭಾಕರ, ಶ್ರೀನಿವಾಸ ಬೆಳದಡಿ, ಯಲ್ಲಪ್ಪ ಮಡಿವಾಳರ, ಶ್ಯಾಂ ಜಾಧವ, ನಜೀರ ಹೊನ್ಯಾಳ ಇನ್ನಿತರರಿದ್ದರು.