ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಮದ್ದೂರು ವಲಯದ ಕರಡಿಕಲ್ ಬೆಟ್ಟ ಅರಣ್ಯ ಪ್ರದೇಶದಲ್ಲಿ ಏ.29ರಂದು ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಬೆಂಕಿ ಹಚ್ಚಿದ ಓರ್ವ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ತಾಲೂಕಿನ ಕಳ್ಳೀಪುರ ಗ್ರಾಮದ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನಿಂದ ನಾಲ್ಕು ತೇಗದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ತನ್ನ ಮತ್ತೋರ್ವ ಸ್ನೇಹಿತ ಜೊತೆಗೆ ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ಸಾಗಾಣೆ ಮಾಡುವ ಸಲುವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನ ಬೇರೆ ಕಡೆ ಕೇಂದ್ರಿಕೃತ ಮಾಡುವ ಉದ್ದೇಶದಿಂದ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ನಂತರ ಅರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಹಸ್ತಾಂತರಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಹಗ್ಗದಹಳ್ಳ ಗ್ರಾಮದ ಕುಮಾರ್ ಬಂಧನಕ್ಕೆ ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿ.ಎಸ್.ಬೆಟ್ಟ ವಲಯದ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಬಲೆ ಬೀಸಲಾಗಿದೆ.
ಆರೋಪಿಗಳ ಪತ್ತೆಗಾಗಿ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್ ಮಾರ್ಗದರ್ಶನದಲ್ಲಿ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ ನೇತೃತ್ವದಲ್ಲಿ ತಂಡ ರಚನೆ ಮಾಡಿ ತನಿಖೆ ಕೈಗೊಳ್ಳಲಾಗಿತ್ತು.
ಕಾಡಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಸಂಬಂಧ ಬಂಡೀಪುರ ಹುಲಿ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಪ್ರಭಾಕರನ್ ತನಿಖಾ ತಂಡದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ.
ಇದನ್ನೂ ಓದಿ: Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ