ಬೆಂಗಳೂರು: ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯಲಹಂಕ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಲಹಂಕ ನ್ಯೂಟೌನ್ ನಿವಾಸಿ ರೇಖಾ(24) ಮೃತ ಮಹಿಳೆ. ಈ ಸಂಬಂಧ ಆಕೆಯ ಪೋಷಕರು ರೇಖಾ ಪತಿ ಸಂತೋಷ್ ವಿರುದ್ಧ ದೂರು ನೀಡಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡು ಮೂಲದ ಸಂತೋಷ್ ಮತ್ತು ರೇಖಾ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಒಂದು ಮಗು ಇದೆ. ಯಲಹಂಕ ನ್ಯೂಟೌನ್‌ನಲ್ಲಿ ವಾಸವಾಗಿದ್ದು, ಆರೋಪಿ ವೆಲ್ಡಿಂಗ್ ಶಾಪ್ ಇಟ್ಟುಕೊಂಡಿದ್ದಾನೆ. ರೇಖಾ ಗೃಹಿಣಿಯಾಗಿದ್ದರು.
ಬುಧವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ರೇಖಾ ಸೀರೆಯನ್ನು ಫ್ಯಾನ್‌ಗೆ ಕಟ್ಟಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಸಂತೋಷ್ ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ದಂಪತಿ ನಡುವೆ ಸಣ್ಣ-ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಅಲ್ಲದೆ, ಸಂತೋಷ್ ಇತ್ತೀಚೆಗೆ ಪತ್ನಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ಆದರಿಂದ ಅಳಿಯ ಸಂತೋಷ್, ಪುತ್ರಿ ರೇಖಾಗಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ತಪ್ಪಿಸಿಕೊಳ್ಳಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ರೇಖಾ ಪೋಷಕರು ದೂರು ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಸದ್ಯ ಸಂತೋಷ್‌ನನ್ನು ವಶಕ್ಕೆ ಪಡೆಯಲಾಗಿದೆ. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.