ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ಗುರುವಾರ ಮಧ್ಯಾಹ್ನದಿಂದ ಸುರಿಯುತ್ತಿದ್ದ ಭಾರೀ ಮಳೆಗೆ ರಸ್ತೆಗಳೆಲ್ಲಾ ಕೆರೆಯಂತಾಗಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ಸಂಜೆಯ ವೇಳೆ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಬಿಟಿಎಂ ಲೇಔಟ್, ಕೆಆರ್ ಸರ್ಕಲ್ ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವಿಧಾನಸೌಧ, ಹೊಸೂರು ರಸ್ತೆ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿರುವುದಾಗಿ ವರದಿ ತಿಳಿಸಿದೆ.
ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಮುಳುಗಿದ್ದು, ಬಸ್ ನಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನೂ ಐದು ದಿನ ಮಳೆ ಸುರಿಯುವ ಸಂಭವ!
ಅರಬ್ಬಿ ಸಮುದ್ರದ ಪೂರ್ವ ಕೇಂದ್ರದಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ಇನ್ನೂ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುವ ಸಂಭವ ಇದ್ದಿರುವುದಾಗಿ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ.