ವಿಧಾನಸಭೆ: ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾ ಹಾಗೂ ಅಸ್ಸಾಂ ಮೂಲದ ವಲಸೆ ಕಾರ್ಮಿಕರ ಪೂರ್ವಪರದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಸ್ಸಾಂನಿಂದ ವಲಸೆ ಬಂದಿರುವ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ, ಈ ವಲಸೆ ಕಾರ್ಮಿಕರು ನಿಜವಾಗಿಯೂ ಅಸ್ಸಾಂ ಮೂಲದವರೇ ಅಥವಾ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದವರೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಅಲ್ಲದೆ,
ಈ ವಲಸೆ ಕಾರ್ಮಿಕರಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ನೀಡಲಾಗಿದೆಯೇ ಎಂಬ ಬಗ್ಗೆಯೂ ಪತ್ತೆ ಹಚ್ಚುವಂತೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿಯ ಸತೀಶ್ ರೆಡ್ಡಿ ಮಾತನಾಡಿ, ಬೆಂಗಳೂರು ನಗರದಲ್ಲಿಯೂ ಇದೇ ರೀತಿ ವಲಸೆ ಕಾರ್ಮಿಕರು ಅಕ್ರಮವಾಗಿ ನೆಲೆ ನಿಂತಿದ್ದು, ಅವರ ಹಿನ್ನೆಲೆ ಬಗ್ಗೆಯೂ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಬೆಳಗಾವಿಯಂಥ ಜಿಲ್ಲೆಯಲ್ಲಿಯೂ ಬಾಂಗ್ಲಾದೇಶದ ಕಾರ್ಮಿಕರು ನೆಲೆಸಿದ್ದು, ಅವರಿಗೆಲ್ಲ ಮತದಾರರ ಗುರುತಿನ ಚೀಟಿ ನೀಡಲಾಗುತ್ತಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಮಾಡಿಸಿಕೊಂಡು ಇಲ್ಲಿಯೇ ನೆಲೆ ನಿಲ್ಲುತ್ತಿದ್ದಾರೆ. ಈ ಕಾರ್ಮಿಕರೆಲ್ಲ ಬಾಂಗ್ಲಾದೇಶದವರು ಎನ್ನುವ ಅನುಮಾನವಿದೆ. ಇದರಿಂದ ಆಂತರಿಕ ಭದ್ರತೆಗೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ, ವಲಸೆ ಕಾರ್ಮಿಕರ ಬಗ್ಗೆ ಸರಕಾರ ನಿಗಾ ವಹಿಸಬೇಕು.
●ಜೀವರಾಜ್, ಬಿಜೆಪಿ ಸದಸ್ಯ