ಬಂಟ್ವಾಳ: ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ. 14ರಂದು ರಾತ್ರಿ ಚೂರಿ ಇರಿತಕ್ಕೊಳಗಾಗಿರುವ ಪುಷ್ಪರಾಜ್ ಅವರ ಕುತ್ತಿಗೆಯ ಭಾಗಕ್ಕೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಶಸ್ತ್ರಚಿಕಿತ್ಸೆ ನಡೆದಿದೆ. ಪ್ರಸ್ತುತ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾವಣೆಯಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಪುಷ್ಪರಾಜ್ ಅವರಿಗೆ ಪರಿಚಯದವನೇ ಆದ ರವಿ ನಾವೂರು ಪ್ರಕರಣದ ಆರೋಪಿಯಾಗಿದ್ದು, ಹಣಕಾಸಿನ ವಿಚಾರದಲ್ಲಿ ಇವರಿಬ್ಬರ ನಡುವೆ ಜಗಳ ನಡೆದಿದೆ ಎಂದು ಗುರುರಾಜ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್ ಅವರನ್ನು ಗುರುರಾಜ್ ಹಾಗೂ ಮತ್ತೋರ್ವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದಂದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆಸ್ಪತ್ರೆಗೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈದ್ಯರಿಂದ ಮುಂದಿನ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದಿದ್ದರು. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಆರೋಪಿ ತಪ್ಪಿಸಿಕೊಂಡಿದ್ದು, ಪೊಲೀಸರ ಒಂದು ತಂಡ ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.