ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ನಾಗರಾಜ (55) ಅಪಘಾತಕ್ಕೊಳಗಾಗಿ ಮೃತಪಟ್ಟ ದುರ್ದೈವಿ.
ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಬೈಕ್ ಸವಾರನೋರ್ವ ತುಂಬೆ ವೈಶಾಲಿ ವೈನ್ಸ್ ನ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾಗರಾಜ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಸವಾರ ದೀಪಕ್ ಶೆಟ್ಟಿ ಗೂ ಸಣ್ಣಪುಟ್ಟ ಗಾಯವಾಗಿದೆ.
ಪಾದಾಚಾರಿ ನಾಗರಾಜ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯವಾಗಿದ್ದು, ಇವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಗೆ ಬೈಕ್ ಸವಾರ ಅಜಾಗರೂಕತೆಯ ಚಾಲನೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.