ಬಂಟ್ವಾಳ: ಪಾಣೆ ಮಂಗಳೂರಿನ ಬೋಳಂಗಡಿಯಲ್ಲಿ ತೋಟದ ಸಮೀಪದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ಡಿ. 29ರಂದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ ಕಳವಾದ ಅಡಿಕೆ, ಸ್ಕೂಟರ್ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಮಂಜುನಾಥ ನಾಗರಾಜ್ ಭೋವಿ (50) ಬಂಧಿತ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಡಿಕೆ ತೋಟದ ಮಾಲಕ ಐವನ್ ತೋರಸ್ ಪೊಲೀಸರಿಗೆ ದೂರು ನೀಡಿದ್ದು, ತಾನು ಒಣಗಲು ಹಾಕಿದ್ದ ಸುಮಾರು 120 ಕೆ.ಜಿ. ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಎಸ್‌ಪಿ ಹಾಗೂ ಎಡಿಶನಲ್ ಎಸ್‌ಪಿ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೋರಟ್ ಮಾರ್ಗದರ್ಶನ ದಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಡಿ. 30ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಳವು ಮಾಡಿದ 105 ಕೆ.ಜಿ. ಅಡಿಕೆ, ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರ, ಹೊನ್ನಾವರ ಠಾಣಾ ವ್ಯಾಪ್ತಿಯಲ್ಲೂ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ.