ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಬಿಬಿಎ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮರಾಜಪೇಟೆ ನಿವಾಸಿ ಶ್ರಾವ್ಯಾ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಮೃತಳು ತಂದೆ ದೊಡ್ಡ ನರಸಿಂಹಮೂರ್ತಿ, ತಾಯಿ ಸುಮಾ ಮತ್ತು ಸಹೋದರಿ ಜತೆ ಚಾಮರಾಜಪೇಟೆಯ 3ನೇ ಮುಖ್ಯರಸ್ತೆಯ ಮನೆಯಲ್ಲಿ ವಾಸವಾಗಿದ್ದರು. ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ವ್ಯಾಂಸಂಗ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಬೆಡ್‌ಶೀಟ್ ವಿಚಾರವಾಗಿ ಅಕ್ಕನೊಂದಿಗೆ ಜಗಳವಾಡಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ತಂದೆ ನರಸಿಂಹ ಮೂರ್ತಿ, ಶ್ರಾವ್ಯಾಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಅಷ್ಟಕ್ಕೆ ಬೇಸರಗೊಂಡ ಶ್ರಾವ್ಯಾ ರಾತ್ರಿ ಎಲ್ಲರೂ ಮಲಗಿದ್ದ ವೇಳೆಯಲ್ಲಿ ಸೀರೆಯಿಂದ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶನಿವಾರ ಬೆಳಗ್ಗೆ ಎಲ್ಲರೂ ಎಚ್ಚರಗೊಂಡರೂ ಶ್ರಾವ್ಯಾ ಕೋಣೆಯಿಂದ ಹೊರಗಡೆ ಬಂದಿಲ್ಲ. ಬಳಿಕ ಕೋಣೆಯ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸುದ್ದಿ ತಿಳಿದು ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಕೌಟುಂಬಿಕ ವಿಚಾರವಾಗಿ ಪೋಷಕರು ಮತ್ತು ಶ್ರಾವ್ಯಾ ನಡುವೆ ಒಂದು ವಾರದಿಂದ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಘಟನೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.