ಧಾರವಾಡ: ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಡಿಸಿ ಕಚೇರಿಯಲ್ಲಿ ಗುರುವಾರ ಜರುಗಿತು.
ಯೋಜನಾ ಸಂಘದ 2018-19ನೇ ಸಾಲಿನಲ್ಲಿ ಕೈಗೊಂಡ ಕಾರ್ಯಕ್ರಮಗಳಿಗೆ ಅನುಮೋದಿಸಿ, 2019-20ನೇ ಸಾಲಿನಲ್ಲಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳಿಗೆ ಒಪ್ಪಿಗೆ ನೀಡಲಾಯಿತು. ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳಿಗೆ ಅಗತ್ಯ ಹಣದ ಆಯವ್ಯಯವನ್ನು ಸರ್ಕಾರಕ್ಕೆ ಕಳುಹಿಸಲು ತೀರ್ಮಾನಿಸಲಾಯಿತು.
ಸಮಿತಿ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್ ಮಾತನಾಡಿ, ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಇಟ್ಟಂಗಿ ಕಾರ್ಖಾನೆ, ಮನೆಗೆಲಸ, ಕಿರಾಣಿ, ಹೋಟೆಲ್, ಕೆಲಸದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಇಂತಹ ಮಕ್ಕಳನ್ನು ಪತ್ತೆ ಹಚ್ಚಿ, ಪುನರ್‌ವಸತಿ ಕಲ್ಪಿಸುವಲ್ಲಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿರಬೇಕು ಎಂದರು.
ವಿವಿಧ ಇಲಾಖೆ ಜಿಲ್ಲಾಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳನ್ನು ಸೇರಿಸಿ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳ ತಂಡ ರಚಿಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ ಕಾರ್ಮಿಕರಿಗೆ ಅಗತ್ಯವಿರುವ ಪುನರ್‌ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಬಾಲ ಕಾರ್ಮಿಕರನ್ನು ಹೊಂದಿರುವ ಕೈಗಾರಿಕೆ ಹಾಗೂ ಸಣ್ಣ ಪುಟ್ಟ ವ್ಯಾಪಾರಿಗಳ ಹಾಗೂ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ, ಕಠಿಣ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಜೂ. 12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಎಮ್ಮಿಕೇರಿ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಲು ಮತ್ತು ಕಾರ್ಯಕ್ರಮದಲ್ಲಿ ಗೌಳಿ ಜನಾಂಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಜನರು, ಬಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜನಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತೆ ಮೀನಾ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್. ಚಿಣ್ಣನ್ನವರ, ಎಸಿಪಿ ಎಸ್.ಎಂ. ಸಂದಿಗವಾಡ, ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಾದೇವ ಹುಲಗೆಜ್ಜಿ ಇನ್ನಿತರರಿದ್ದರು.