ಚಾಮರಾಜನಗರ: ಬೇಸಿಗೆ ಸನ್ನಿಹಿತವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು.
ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಕುಡಿಯುವ ನೀರಿನ ಪೂರೈಕೆ ಬಗೆಗೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದ ಅವರು, ಬೇಸಿಗೆಯಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆಯನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು. ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನುತ್ವರಿತವಾಗಿ ಪೂರ್ಣಗೊಳಿಸಬೇಕು. ಜತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ (ಆರ್‌ಓ ಪ್ಲ್ಯಾಂಟ್) ವ್ಯರ್ಥವಾಗುವ ನೀರನ್ನು ಬಳಕೆ ಮಾಡುವ ವಿಧಾನಗಳ ಬಗ್ಗೆ ಕಾರ್ಯಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿಪ್ರಗತಿ ಪರಾಮರ್ಶಿಸಿದ ಉಸ್ತುವಾರಿ ಕಾರ್ಯದರ್ಶಿಯವರು, ನಿಗದಿತ ಅವಧಿಯೊಳಗೆ ಯೋಜನೆ ಕೆಲಸಗಳು ಪೂರ್ಣವಾಗಬೇಕು. ಸಮನ್ವಯದಿಂದ ಇಲಾಖೆಗಳು ಕಾರ್ಯನಿರ್ವಹಿಸಿ, ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಸಮರ್ಪಕವಾಗಿ ಅನುದಾನ ಬಳಸಿಕೊಳ್ಳಿ: ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಅನುಕೂಲ ಕಲ್ಪಿಸಬೇಕು. ಪ್ರತಿ ತಿಂಗಳು ಯೋಜನೆಯ ಕುರಿತು ಪ್ರಗತಿ ಪರಿಶೀಲಿಸಬೇಕು. ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅನುದಾನದಡಿ ವೆಚ್ಚ ಮಾಡಲಾದ ಖರ್ಚು- ವೆಚ್ಚಗಳ ಮಾಹಿತಿಯನ್ನು ಪ್ರತಿ ಮಾಹೆ ಕಡ್ಡಾಯವಾಗಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇ-ಆಫೀಸ್ ನಿರ್ವಹಣೆಗೆ ಸಜ್ಜಾಗಿ: ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದ ಅವರು, ಇ-ಆಫೀಸ್ ಮೊದಲ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಹಾಗೂ ಅರಣ್ಯ ಇಲಾಖೆಗಳಲ್ಲಿ ಆರಂಭವಾಗಿದೆ. ಉಳಿದ ಇಲಾಖೆಗಳು ಸಹ ಇ-ಆಫೀಸ್ ನಿರ್ವಹಣೆಗೆ ಸಜ್ಜಾಗಬೇಕು. ಸಕಾಲದಡಿ ಎಲ್ಲಾ ಇಲಾಖೆಗಳು ಅರ್ಜಿ ಸ್ವೀಕರಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.
ರಸಗೊಬ್ಬರಗಳ ದಾಸ್ತಾನು, ಮಳೆ- ಬೆಳೆ, ಮೇವು ಲಭ್ಯತೆ, ಬೆಳೆ ಸಮೀಕ್ಷೆ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಚ್. ನಾರಾಯಣರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಿಖೀತಾ ಚಿನ್ನಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.