Advertisement

“ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರಿಕೆ ವಹಿಸಿ’

08:53 PM May 21, 2019 | Team Udayavani |

ಮಡಿಕೇರಿ :ಜಿಲ್ಲೆಯ ಎಲ್ಲ ಶಾಲೆ, ವಿದ್ಯಾರ್ಥಿ ನಿಲಯಗಳು ಮತ್ತು ಕಲ್ಯಾಣ ಮಂದಿರಗಳಲ್ಲಿ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಘಟಕಗಳಿಂದ ನೀರಿನ ಜೈವಿಕ ವಿಶ್ಲೇಷಣೆಯನ್ನು ಮಾಡಿ ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳ ಅಂತರ್‌ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕಳೆದ ಸಭೆಯ ಅನುಪಾಲನಾ ವರದಿಯ ಪ್ರಗತಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌ ಅವರಿಂದ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷೆಗೆ ಒಳಪಡಿಸಿ ಕುಡಿಯಲು ಯೋಗ್ಯವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಕಲುಷಿತ ನೀರಿನ ಬಳಕೆಗೆ ಕಡಿವಾಣ ಹಾಕಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಕೆ.ಮೋಹನ್‌ ಅವರು ಜಿಲ್ಲೆಯಲ್ಲಿ 356 ಕಡೆಗಳಲ್ಲಿ ಬಳಕೆಗೆ ಯೋಗ್ಯವಾದ ಕುಡಿಯುವ ನೀರಿನ ಮೂಲಗಳಿದ್ದು, ಇವುಗಳ ನೀರನ್ನು ಪರೀಕ್ಷಿಸಿ ವರದಿ ಪಡೆದುಕೊಂಡಿರುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿರುವ 17 ಕೊಳವೆ ಬಾವಿಗಳ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ. ಈ ಮೂಲಗಳ ನೀರಿನ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Advertisement

ಬಳಿಕ ಮಾತನಾಡಿದ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಶಾಲಾ ಮಕ್ಕಳಿಗೆ ಡೆಂಗ್ಯು ಜ್ವರದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಚರ್ಚಾ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ನಡೆಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ, ಕೈಗಾರಿಕಾ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಹಾಡಿಗಳಲ್ಲಿ ಹಾಗೂ ಕುಗ್ರಾಮಗಳಲ್ಲಿ ವಾಸಿಸುವ ಜನರಿಗೆ ಡೆಂಗ್ಯು ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಸಭೆ ಆಯುಕ್ತರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಡೆಂಗ್ಯು ನಿಯಂತ್ರಣಕ್ಕೆ ಸ್ವತ್ಛತಾ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿ ಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಡೆಂಗ್ಯು ರೋಗ ಬಾರದಂತೆ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ|ಶಿವ ಕುಮಾರ್‌, ನಗರಸಭೆ ಆಯುಕ್ತರಾದ ರಮೇಶ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಪರಿಸರ ಅಧಿಕಾರಿ ಗಣೇಶನ್‌, ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next